ADVERTISEMENT

ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತಷ್ಟು ಬಲಗೊಳ್ಳಲಿ: ಬಸವರಾಜು ಕರೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 2:34 IST
Last Updated 6 ಜುಲೈ 2025, 2:34 IST
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಎಚ್.ಸಿ. ಬಸವರಾಜು ಮಾತನಾಡಿದರು
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಎಚ್.ಸಿ. ಬಸವರಾಜು ಮಾತನಾಡಿದರು   

ಚಾಮರಾಜನಗರ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಲು ಪಕ್ಷದ ಪದಾಧಿಕಾರಿಗಳು ಹೆಚ್ಚಿನ ಒತ್ತುನೀಡಿ ಶ್ರಮವಹಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಉಸ್ತುವಾರಿ ಎಚ್.ಸಿ. ಬಸವರಾಜು ಕರೆ ನೀಡಿದರು.

‘ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಬಲಿಷ್ಟವಾಗಿ ಸಂಘಟನೆ ಮಾಡುವ ಜವಾಬ್ದಾರಿ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದು ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗಳಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರ್ಯಕರ್ತರು ಹಾಗೂ ಪ್ರಮುಖ ಪದಾಧಿಕಾರಿಗಳ ಶ್ರಮ ಮುಖ್ಯವಾಗಿದೆ’ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಮಿಲ್ಲನ್ ಧರ್ಮಸೇನಾ ಮಾತನಾಡಿ, ‘ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಸಂವಿಧಾನ ವಿರೋಧಿ ಧೋರಣೆ ವಿರುದ್ದ ಜನಜಾಗೃತಿ ಮೂಡಿಸಬೇಕು. ದಿ.ಆರ್.ಧ್ರುವನಾರಾಯಣ್ ಮಾದರಿಯಲ್ಲಿ ಪಕ್ಷ ಸಂಘಟನೆ ಮಾಡಬೇಕು. ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ’ ಎಂದು ಭರವಸೆ ನೀಡಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ‘ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದು ಎಂಟು ಬ್ಲಾಕ್‌ಗಳ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಕಾರ್ಯಕರ್ತರಲ್ಲಿ ಹುರುಪು ತುಂಬಿದ್ದಾರೆ. ಮುಂದೆಯೂ ಪಕ್ಷ ಸಂಘಟನೆಗೆ ಒತ್ತು ನೀಡಬೇಕಾಗಿದೆ. ರಾಜ್ಯ ಉಸ್ತುವಾರಿ ಸುರ್ಜುವಾಲಾ ಅವರು ಎಲ್ಲ ಹಂತದ ಪದಾಧಿಕಾರಿಗಳು, ಶಾಸಕರು, ಸಚಿವರೊಂದಿಗೆ ಸಮಾಲೋಚನೆ ಮಾಡಿದ್ದು ಜಿಲ್ಲಾಧ್ಯಕ್ಷರ ಜೊತೆಯೂ ಚರ್ಚಿಸಲಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಹೊಂಗನೂರು ಚಂದ್ರು, ತೋಟೇಶ್, ಮುನಿರಾಜು, ರಾಜಶೇಖರ್, ಈಶ್ವರ್, ಎಸ್‌ಸಿ ಘಟಕದ ಅಧ್ಯಕ್ಷ ಸೋಮೇಶ್ವರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಮಹೇಶ್, ಕೆಪಿಸಿಸಿ ಸದಸ್ಯ ಸೈಯದ್ ರಫಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಬ್ಜಲ್ ಷರೀಫ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ಎನ್‌ಎಸ್‌ಯು ಅಧ್ಯಕ್ಷ ನಗುಮೋಹನ್, ರವಿಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.