
ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ನ.26ರಂದು ಸಂವಿಧಾನ ದಿನಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೋಮವಾರ ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ದತೆಗಳನ್ನು ಪರಿಶೀಲಿಸಿದರು.
ಅಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಭವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಬೇಕು, ಸಂವಿಧಾನ ಜಾಗೃತಿ ಜಾಥಾ ನಡೆಸಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂವಿಧಾನ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂವಿಧಾನ ಪೀಠಿಕೆ ವಾಚನ, ಡಾ.ಬಿ.ಆರ್.ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಮಕ್ಕಳಿಂದ ನೃತ್ಯ ರೂಪಕ, ಅಂಬೇಡ್ಕರ್ ವಿಚಾರಧಾರೆ, ಸಂವಿಧಾನದ ಆಶಯಗಳ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ವಿವಿಧ ಇಲಾಖೆಗಳು ಹೊಣೆಗಾರಿಕೆಯಿಂದ ಜವಾಬ್ದಾರಿ ನಿಭಾಯಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್.ಬಿಂದ್ಯಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಪಾಟೀಲ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಪುಟ್ಟಗೌರಮ್ಮ, ತಹಶೀಲ್ದಾರ್ ಗಿರಿಜಾ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.