
ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭಕ್ಕೆ ಸಜ್ಗುಗೊಂಡಿದೆ. ನ.20ರಂದು ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಜರ್ಮನ್ ಮಾದರಿಯ ವಿಶಾಲ ಟೆಂಟ್ ಹಾಕಲಾಗಿದ್ದು 25,000 ಆಸನಗಳನ್ನು ಹಾಕಲಾಗಿದೆ. ಮುಖ್ಯದ್ವಾರದಲ್ಲಿ ಆಕರ್ಷಕ ಸ್ವಾಗತ ಗೋಪುರ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವವರಿಗೆ ಕುಡಿಯುವ ನೀರು, ಮಜ್ಜಿಗೆ, ಊಟ, ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ವೀಕ್ಷಣೆಗೆ ಅನುವಾಗುವಂತೆ ಬೃಹತ್ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.
ಗಣ್ಯರ ಭೇಟಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆ ವಹಿಸುವುದರ ಜೊತೆಗೆ ಗೋಪೂಜೆ ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಹಕಾರ ಪಿತಾಮಹರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಚಾಮರಾಜನಗರದ ಶಾಸಕರೂ ಆಗಿರುವ ಸಿ.ಪುಟ್ಟರಂಗಶೆಟ್ಟಿ ಸಹಕಾರ ಜಾಥಾ ಉದ್ಘಾಟಿಸುವರು. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು.
ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು ಉಪಸ್ಥಿತರಿರಲಿದ್ದಾರೆ.
ಸಹಕಾರ ಇಲಾಖೆಯ ಕಾರ್ಯದರ್ಶಿ ಎಸ್.ಬಿ.ಶೆಟ್ಟಣ್ಣನವರ್, ರಾಜ್ಯ ಸಹಕಾರ ಸಂಘಗಳ ನಿಬಂಧಕರಾದ ಟಿ.ಎಚ್.ಎಂ. ಕುಮಾರ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಎಸ್‌ಪಿ ಬಿ.ಟಿ.ಕವಿತಾ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿ, ಸಚಿವರು ಸಹಿತ ಗಣ್ಯರು ಕಾರ್ಯಕ್ರಮದಲ್ಲಿ ಭಾಗಹಿಸುವ ಹಿನ್ನೆಲೆಯಲ್ಲಿ ಸಮಾರಂಭ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಸಚಿವರಿಗೆ ಶುಭಕೋರುವ ಫ್ಲೆಕ್ಸ್, ಕಟೌಟ್‌ಗಳು ಎಲ್ಲೆಡೆ ರಾರಾಜಿಸುತ್ತಿವೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ, ನೆರಳಿನ ವ್ಯವಸ್ಥೆ, ಗಣ್ಯರ ಆಸನ, ಬ್ಯಾರಿಕೇಡ್ ಅಳವಡಿಕೆ, ಉಪಹಾರ, ಕುಡಿಯುವ ನೀರು ವಿತರಣೆಗೆ ನಿರ್ಮಿಸಿರುವ ಕೌಂಟರ್‌ಗಳು, ಆರೋಗ್ಯ ಸಿಬ್ಬಂದಿ ನಿಯೋಜನೆ, ಭದ್ರತಾ ವ್ಯವಸ್ಥೆಗಳನ್ನು ವೀಕ್ಷಿಸಿದರು.
ಮುಖ್ಯಮಂತ್ರಿಗಳು, ಗಣ್ಯರು ಬರವ ಮಾರ್ಗ, ಸಾರ್ವಜನಿಕರು ಪ್ರವೇಶಿಸುವ ಮುಖ್ಯದ್ವಾರ, ವಾಹನಗಳ ನಿಲುಗಡೆ, ಊಟೋಪಾಚಾರಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ ಕಾರ್ಯಕ್ರಮದಲ್ಲಿ 30,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿವೆ ಎಂದರು.
ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷ ಹೆಚ್.ಎಸ್.ನಂಜುಂಡಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಎಸ್‌ಪಿ ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಗಿರಿಜಾ ಇದ್ದರು.
ವಾಹನ ನಿಲುಗಡೆಗೆ ಸ್ಥಳ ನಿಗದಿ
ಬಸ್ ಟೆಂಪೊ ವಾಹನಗಳನ್ನು ಈದ್ಗಾ ಮೈದಾನ ಮತ್ತು ಪಾಲಿಟೆಕ್ನಿಕ್ ಕಾಲೇಜು ಮೈದಾನದಲ್ಲಿ ನಿಲುಗಡೆ ಮಾಡಬೇಕಿದೆ. ಕಾರು ಆಟೋ ಇನ್ನಿತರ ನಾಲ್ಕು ಚಕ್ರದ ವಾಹನಗಳು ಮತ್ತು ದ್ವಿಚಕ್ರ ವಾಹನಗಳನ್ನು ಡಿ.ಎ.ಆರ್ ಕೇಂದ್ರ ಸ್ಥಾನದ ಮುಂದಿನ ಮೈದಾನದಲ್ಲಿ ನಿಲುಗಡೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ತಿಳಿಸಿದ್ದಾರೆ.
‘ಮುಖ್ಯಮಂತ್ರಿ ಮೇಲೆ ಮಾದೇಶ್ವರನ ಕೃಪೆ’
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ನೀಡಿದಾಗಲೆಲ್ಲ ಕುರ್ಚಿ ಗಟ್ಟಿಯಾಗುತ್ತಲೇ ಇದೆ. ಸಿದ್ದರಾಮಯ್ಯ ಅವರ ಮೇಲೆ ಮಲೆ ಮಹದೇಶ್ವರನ ಕೃಪೆ ಇದೆ. ಸಂಪುಟ ಪುನಾರಚನೆ ಹಾಗೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.