
ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಗುಡ್ಡಗಾಡು ಓಟ ಕ್ರೀಡಾಕೂಟದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ.ಸ್ವಾಮಿ ಅಭಿನಂದಿಸಿದರು.
ನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಸೋಮವಾರ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಜೆಎಸ್‌ಸ್ ಕಾಲೇಜು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿರುವುದು ಕಾಲೇಜಿಗೆ ಹೆಮ್ಮೆಯ ವಿಚಾರ. ಮುಂದೆಯೂ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಸಾಧನೆ ಮಾಡಲಿ ಎಂದು ಆಶಿಸಿದರು.
ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಪ್ರತಿಭೆಗೂ ನೀರೆರದು ಪೋಷಿಸಲಾಗುತ್ತಿದೆ. ಪಠ್ಯದಷ್ಟೆ ಪಠ್ಯೇತ್ತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪರಿಣಾಮ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು.
ಜೆಎಸ್ಎಸ್ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿನಿ ಹೇಮಾ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ಕಾಲೇಜಿನ ಇತರೆ ವಿದ್ಯಾರ್ಥಿನಿಯರು ಕೂಡ ಉತ್ತಮ ಪ್ರದರ್ಶನ ನೀಡಿರುವುದು ಸಂತಸದ ಸಂಗತಿ ಎಂದರು.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಹೇಮಾ ಮಾತನಾಡಿ, ‘ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಪೋಷಕರು ಸ್ಪೂರ್ತಿ’ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ಮಹದೇವಸ್ವಾಮಿ ಮಾತನಾಡಿ, ಕಾಲೇಜಿನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿನಿಯರು ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದರು.
ಚಾಮರಾಜನಗರ ವಿಶ್ವವಿದ್ಯಾಲಯ ಕ್ರೀಡಾ ಸಲಹೆ ಸಮಿತಿ ಸದಸ್ಯ ಜಿ.ಬಂಗಾರು ಮಾತನಾಡಿ, ‘ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಾಂತರಾಜು ಮಾರ್ಗದರ್ಶನ ಹಾಗೂ ನಿರಂತರವಾಗಿ ಕ್ರೀಡಾಕೂಟಗಳ ಆಯೋಜನೆಯ ಫಲವಾಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಸಹಕಾರಿಯಾಗಿದೆ ಎಂದರು.
ವಿದ್ಯಾರ್ಥಿನಿಯರಾದ ಜಿ.ಸೌಂದರ್ಯ, ಎನ್.ಪಾರ್ವತಿ, ಎ ಐಶ್ವರ್ಯಾ ಮಾತನಾಡಿದರು. ಉಪನ್ಯಾಸಕ ವಿಕ್ರಂ, ಕಾಲೇಜಿನ ವ್ಯವಸ್ಥಾಪಕ ಗುರುಮಲ್ಲಪ್ಪ, ಕ್ರೀಡಾ ಇಲಾಖೆ ಸಹಾಯಕ ವೀರಣ್ಣ, ವಿದ್ಯಾರ್ಥಿನಿರಾದ ಪ್ರಿಯಾ ಪಿ, ನವ್ಯಾ ಎನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.