ಚಾಮರಾಜನಗರ: ನಾಡಹಬ್ಬ ದಸರಾ ಅಂಗವಾಗಿ ಆಯೋಜಿಸುತ್ತಿರುವ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ 2025–26ನೇ ಸಾಲಿನ ದಸರಾ ಕ್ರೀಡಾಕೂಟ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ದಸರಾ ಕ್ರೀಡಾಕೂಟ ಲೋಪದೋಷಗಳಿಲ್ಲದೆ ನಡೆಯಬೇಕು. ಪ್ರತಿಭಾನ್ವಿತ ಕ್ರೀಡಾಪಟುಗಳು ಆಯ್ಕೆಗೆ ವೇದಿಕೆ ಒದಗಿಸಬೇಕು ಎಂದರು.
ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ವಿಭಾಗ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಲಿದ್ದಾರೆ. ಉತ್ತಮ ಕ್ರೀಡಾಪಟುಗಳನ್ನು ಗುರುತಿಸಲು ಅಚ್ಚುಕಟ್ಟಾಗಿ ಕ್ರೀಡಾಕೂಟ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕ್ರೀಡಾಕೂಟದಲ್ಲಿ 28 ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ತಾಲ್ಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಕೊಕ್ಕೊ, ಕಬಡ್ಡಿ, ಥ್ರೋಬಾಲ್, ಯೋಗಾಸನ ಮತ್ತು ಜಿಲ್ಲಾಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಕೊಕ್ಕೊ, ಕಬಡ್ಡಿ, ಥ್ರೋಬಾಲ್, ಬಾಸ್ಕೆಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಯೋಗಾಸನ ಹಾಗೂ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಎಲ್ಲ ಕ್ರೀಡೆಗಳು ಗೊಂದಲಗಳು ಇಲ್ಲದಂತೆ ನಡೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕ್ರೀಡಾಕೂಟ ಆಯೋಜನೆಗೆ ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಬೇಕು. ಗಣ್ಯರು, ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕ್ರೀಡಾಕೂಟಕ್ಕೆ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲು ನುರಿತ ದೈಹಿಕ ಶಿಕ್ಷಕರನ್ನು ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕ್ರೀಡಾಕೂಟದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕು. ತುರ್ತು ವೈದ್ಯಕೀಯ ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದರು.
ಪ್ರತಿವರ್ಷದಂತೆ ಈ ಬಾರಿಯೂ ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಜನ್ಮದಿನದ ಪ್ರಯುಕ್ತ ಆ.29ರಂದು ದೇಶದಾದ್ಯಂತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಗುತ್ತದೆ. ಇದರ ಅಂಗವಾಗಿ ಜಿಲ್ಲೆಯಲ್ಲಿಯೂ ಮಹಿಳೆಯರಿಗೆ ಹಾಗೂ ಪುರುಷರಿಗೆ 5 ಕಿ.ಮೀ ಅಂತರದ ಮ್ಯಾರಥಾನ್ ಓಟ ಆಯೋಜಿಸಬೇಕು. ವಿಜೇತರಾದವರಿಗೆ ನಗದು ಬಹುಮಾನ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.