ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಆಚರಣೆಯ ಭಾಗವಾಗಿ ರಾಜ್ಯ ಸರ್ಕಾರವು ಇದೇ 15ರಂದು ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿಯೂ ಕಾರ್ಯಕ್ರಮದ ಆಯೋಜನೆಗೆ ಎಲ್ಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾ ನಾಗ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಜೂಮ್ ಮೂಲಕ ಸಭೆ ನಡೆಸಿದ ಅವರು, ‘ಭಾರತ ಸಂವಿಧಾನದ ಮಹತ್ವವನ್ನು ಸಾರುವ ಉದ್ದೇಶದಿಂದ 15ರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಸಂವಿಧಾನದ ಪೀಠಿಕೆ ಓದುವರು. ಇದೇ ಸಮಯಕ್ಕೆ ಚಾಮರಾಜನಗರ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ, ಗ್ರಾಮ ಪಂಚಾಯಿತಿ, ವಾರ್ಡ್‌ವಾರು, ಸರ್ಕಾರಿ, ಖಾಸಗಿ ಕಚೇರಿ, ಶಾಲಾ ಕಾಲೇಜು, ಸ್ಥಳೀಯ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲೆಡೆ ಏಕಕಾಲದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಆಯೋಜನೆ ಮಾಡಬೇಕು. ಇದಕ್ಕಾಗಿ ಸಕಲ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು’ ಎಂದರು.
‘ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಅಂದು ಬೆಳಿಗ್ಗೆ ಜಾಥಾ ಹೊರಡಲು ಸಿದ್ದತೆ ಮಾಡಬೇಕು. ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಓದುವ ಬೃಹತ್ ಕಾರ್ಯಕ್ರಮ ಏರ್ಪಾಡು ಮಾಡಬೇಕು. ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರೆಲ್ಲರೂ ಭಾಗಿಯಾಗುವಂತೆ ಕಾರ್ಯಕ್ರಮ ರೂಪುಗೊಳ್ಳಬೇಕು’ ಎಂದರು.
‘ತಾಲ್ಲೂಕು, ಗ್ರಾಮ ಪಂಚಾಯಿತಿ, ವಾರ್ಡುಗಳಲ್ಲಿಯೂ, ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಏರ್ಪಾಡು ಮಾಡುವುದರೊಂದಿಗೆ ಜಾಥಾಗಳನ್ನು ನಡೆಸಬೇಕು. ಸ್ಥಳೀಯ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಸದಸ್ಯರು ಸೇರಿದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಅರ್ಥಪೂರ್ಣವಾಗಿ ಕಾರ್ಯಕ್ರಮ ಏರ್ಪಡಿಸಬೇಕು. ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
‘ಪ್ರಜಾಪ್ರಭುತ್ವದ ದಿನ ಆಚರಣೆ ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಸಲಹೆ ಪಡೆಯಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಲಹಾ ಸಮಿತಿಗಳನ್ನು ರಚಿಸಬೇಕು. ಸಮಿತಿಯಲ್ಲಿ ವಿವರವಾಗಿ ಚರ್ಚಿಸಿ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ನಗರಸಭೆ ಆಯುಕ್ತ ಎಸ್.ವಿ. ರಾಮ್‌ದಾಸ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಇದ್ದರು.
ಆನ್‌ಲೈನ್ ನೋಂದಣಿಗೆ ಅವಕಾಶ
‘ಸಂವಿಧಾನದ ಪೀಠಿಕೆ ಓದಲು ಎಲ್ಲರೂ ಆನ್‌ಲೈನ್ ಲಿಂಕ್ The Preamble Landing – Kannada – GoK (thepreamble-swdkar.in) ಮೂಲಕ ನೋಂದಾಯಿಸಿಕೊಳ್ಳಬಹುದು. ಅಲ್ಲದೇ ಮೊಬೈಲ್ ಗ್ರಾಮ ಒನ್ ಕೇಂದ್ರ ಅಟಲ್‌ಜೀ ಜನಸ್ನೇಹಿ ಕೇಂದ್ರ ಗ್ರಾಮ ಪಂಚಾಯಿತಿ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳು ಸಿಡಿಪಿಓ ಕಚೇರಿ ರೈತ ಸಂಪರ್ಕ ಕೇಂದ್ರ ಸ್ಥಳೀಯ ಸಹಕಾರ ಸಂಘಗಳ ಕಚೇರಿಗಳಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ’ ಎಂದು ಶಿಲ್ಪಾ ನಾಗ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.