ADVERTISEMENT

ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳ ಬಲವರ್ಧನೆಗೆ ಸಚಿವರ ಸೂಚನೆ

‘ಗೂಗಲ್‌ಮೀಟ್‌’ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಎಸ್.ಸುರೇಶ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 16 ಮೇ 2021, 6:19 IST
Last Updated 16 ಮೇ 2021, 6:19 IST
ಸುರೇಶ್‌ ಕುಮಾರ್‌
ಸುರೇಶ್‌ ಕುಮಾರ್‌    

ಚಾಮರಾಜನಗರ: ತಾಲ್ಲೂಕು ಹಾಗೂ ಜಿಲ್ಲಾ ಕೋವಿಡ್ ಆಸ್ಪತ್ರೆಗಳ ಬಲವರ್ಧನೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಿಂದ ಅವರು ಶನಿವಾರ ‘ಗೂಗಲ್‌ ಮೀಟ್‌’ ಮೂಲಕ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿದರು.

ಕೋವಿಡ್ ತಪಾಸಣಾ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಬೇಕು ಹಾಗೂ ಹೋಂ ಐಸೊಲೇಷನ್‍ಗೆ ನಿಗದಿ ಮಾಡಲಾದ ಸೌಲಭ್ಯ ಇಲ್ಲದವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲು ಮಾಡಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

ಕೊರೊನಾ ಸೋಂಕಿತರಿಗೆ ಆಯಾ ತಾಲ್ಲೂಕಿನಲ್ಲಿಯೇ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರ, ಹೋಂ ಐಸೊಲೇಷನ್‍ಗೆ ಶಿಫಾರಸು ಮಾಡಬೇಕೆ ಎಂಬ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ತಪಾಸಣಾ ಕಾರ್ಯಗಳನ್ನು ಇದೇ ವೇಳೆ ಅವರು ಪರಿಶೀಲನೆ ನಡೆಸಿದರು.

ಕೋವಿಡ್ ತಡೆಗೆ ಆಸ್ಪತ್ರೆಗಳಿಗೆ ಇನ್ನಷ್ಟು ಸೌಲಭ್ಯಗಳನ್ನು ಪಡೆದುಕೊಂಡು ಸೋಂಕಿತರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳುವುದನ್ನು ಮುಂದುವರೆಸಬೇಕು. ಪಿಜಿಷಿಯನ್ ಹಾಗೂ ಇನ್ನಿತರ ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದರು.

ಈಗಾಗಲೇ ಲಭ್ಯವಿರುವ ಆಮ್ಲಜನಕ ವ್ಯವಸ್ಥೆ ಹಾಗೂ ಪೂರೈಸಲಾಗಿರುವ ಆಮ್ಲಜನಕ ಕಾನ್ಸಟ್ರೇಟರ್‌ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಕೋವಿಡ್ ಕೇರ್ ಕೇಂದ್ರಗಳಲ್ಲಿ ಔಷಧ, ಗುಣಮಟ್ಟದ ಊಟ, ಉಪಹಾರಗಳಿಗೆ ಕೊರತೆಯಾಗಬಾರದು. ಇಲ್ಲಿ ದಾಖಲಾಗಿ ಬಿಡುಗಡೆಯಾಗುವವರ ಅನುಭವ ಹಾಗೂ ಅಭಿಪ್ರಾಯಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದು ಹೇಳಿದರು.

ಸೋಂಕಿತರಿಗೆ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿಯೇ ತಪಾಸಣಾ ಪ್ರಕ್ರಿಯೆ ಮಾಡುವುದರಿಂದ ಸೋಂಕು ತಡೆಗೆ ಅನುಕೂಲವಾಗಲಿದೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ ಅಂಗವಿಕಲರಿಗೆ ನೆಲ ಮಹಡಿಯಲ್ಲಿಯೇ ಅವಕಾಶ ಕಲ್ಪಿಸಬೇಕು. ಅವರಿಗಾಗಿಯೇ ಅನುಕೂಲವಾಗುವಂತಹ ಶೌಚಾಲಯಗಳ ನಿರ್ಮಾಣಕ್ಕೂ ಗಮನಹರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣ್ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ.ಸಂಜೀವ್, ನೋಡಲ್ ಅಧಿಕಾರಿಗಳಾದ ಅರಣ್ಯ ಉಪಸಂರಕ್ಷಣಾಧಿಕಾರಿ ಡಾ.ಸಂತೋಷ್ ಕುಮಾರ್, ಏಡುಕೊಂಡಲು, ಆರ್.ಸಿ.ಎಚ್. ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಂಸದರ ನಿಧಿಯಿಂದ ₹ 50 ಲಕ್ಷ ನೀಡುವೆ– ವಿ.ಶ್ರೀನಿವಾಸಪ್ರಸಾದ್

ಸಭೆಯಲ್ಲಿ ಪಾಲ್ಗೊಂಡ ಸಂಸದ ವಿ.ಶ್ರೀನಿವಾಸ ಪ್ರಸಾದ್ ಕೋವಿಡ್ ನಿರ್ವಹಣಾ ಕಾರ್ಯಗಳಿಗೆ ತಮ್ಮ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ದಿ ಅನುದಾನದ ಎರಡನೇ ಕಂತಿನಲ್ಲಿ ₹ 50 ಲಕ್ಷವನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಶಾಸಕರ ಸಲಹೆಗಳೇನು?

ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಕ್ಷೇತ್ರ ವ್ಯಾಪ್ತಿಯ ಹಲವೆಡೆ ಒಂದೇ ಗ್ರಾಮದಲ್ಲಿ ಹೆಚ್ಚು ಸೋಂಕು ಪ್ರಕರಣಗಳು ಕಂಡುಬಂದಿವೆ. ಇಂತಹ ಕಡೆ ಕಂಟೈನ್‍ಮೆಂಟ್ ವಲಯಗಳನ್ನಾಗಿ ಘೋಷಿಸಿ ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳುವುದರಿಂದ ಸೋಂಕು ಮತ್ತಷ್ಟು ಹರಡದಂತೆ ತಡೆಯಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.

ಶಾಸಕ ಎನ್.ಮಹೇಶ್ ಮಾತನಾಡಿ, ಕೊಳ್ಳೇಗಾಲ ಭಾಗದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಲ್ಲಿನ ಆಸ್ಪತ್ರೆಯನ್ನು ಮತ್ತಷ್ಟು ಸೌಲಭ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

‘ಗುಂಡ್ಲುಪೇಟೆ ತಾಲ್ಲೂಕಿಗೆ ಆಕ್ಸಿಜನ್ ಕಾನ್ಸ್‌ಂಟ್ರೇಟರ್‌ಗಳನ್ನು ಹೆಚ್ಚು ಒದಗಿಸಬೇಕು’ ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.