ADVERTISEMENT

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಪ್ಯಾಕೇಜ್‌ ಘೋಷಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 15:19 IST
Last Updated 5 ಮಾರ್ಚ್ 2021, 15:19 IST
ಲಿಂಗರಾಜು
ಲಿಂಗರಾಜು   

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇದೇ 8ರಂದು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಹಂಚಿಕೆ ಮಾಡಬೇಕು ಮತ್ತು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ತಾಲ್ಲೂಕು ಉಪ್ಪಾರ ಸಂಘ ಒತ್ತಾಯಿಸಿದೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಂಘದ ಅಧ್ಯಕ್ಷ ಪಿ.ಲಿಂಗರಾಜು ಅವರು, ‘ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಉಪ್ಪಾರ ಜನಾಂಗವು ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲೇ ಮೂರು ಲಕ್ಷಕ್ಕೂ ಹೆಚ್ಚು ಉಪ್ಪಾರರಿದ್ದು, ಬಹುತೇಕರು ಬಡವರಾಗಿದ್ದಾರೆ. ಗುಡಿಸಲುಗಳಲ್ಲೇ ವಾಸಿಸುತ್ತಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹಾಗು 18ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಹಾಗಿದ್ದರೂ ರಾಜಕೀಯ ಪಕ್ಷಗಳು ಉಪ್ಪಾರ ಸಮಾಜವನ್ನು ಗುರುತಿಸಿಲ್ಲ’ ಎಂದು ಅವರು ಆರೋಪಿಸಿದರು.

‘ರಾಜ್ಯದಲ್ಲಿ ಉಪ‍್ಪಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದರೂ, ಸಮುದಾಯಕ್ಕೆ ಏನೂ ಪ್ರಯೋಜನವಾಗುತ್ತಿಲ್ಲ. ನಿಗಮವು ಹೆಸರಿಗಷ್ಟೇ ಸೀಮಿತವಾಗಿದೆ.ಉಪ್ಪಾರರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ನಿಗಮಕ್ಕೆ ₹100 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ಎಸ್‌ಟಿಗೆ ಸೇರಿಸಿ: ಉಪ್ಪಾರ ಸಮುದಾಯವು ಈಗ ಪ್ರವರ್ಗ–1ರಲ್ಲಿ ಬರುತ್ತದೆ. ಜನಾಂಗವು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವುದರಿಂದ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಅರ್ಹವಾಗಿದೆ. ಹಾಗಾಗಿ ಉಪ್ಪಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಅವರು ಕ್ರಮ ಕೈಗೊಳ್ಳಬೇಕು. ರಾಜಕೀಯ ಪಕ್ಷಗಳು ಕೂಡ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು. ವಿಧಾನಸಭೆ, ಲೋಕಸಭೆ, ವಿಧಾನಪರಿಷತ್‌ ಚುನಾವಣೆಗಳಲ್ಲಿ ಉಪ್ಪಾರರಿಗೆ ಟಿಕೆಟ್‌ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಕೆ.ನೀಲಶೇಖರ್, ಖಜಾಂಚಿ ಮಹದೇವಶೆಟ್ಟಿ, ನಾಗೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.