ಚಾಮರಾಜನಗರ: ಮೂರು ಬಾರಿ ಶಾಸಕರಾಗಿರುವ, ದಲಿತ ಸಮುದಾಯದ ನಾಯಕರಾಗಿರುವ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಮಹದೇವ್ ಒತ್ತಾಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯಾದ ಬಳಿಕ ದಲಿತ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ನೀಡಿಲ್ಲ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ದಲಿತ ಸಮುದಾಯದ ಪರವಾಗಿ ಎಆರ್‌ಕೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
1994 ಪ್ರಥಮ ಬಾರಿ 1999ರಲ್ಲಿ ಎರಡನೇ ಬಾರಿ ಹಾಗೂ 19 ವರ್ಷಗಳ ಬಳಿಕ 2023ರ ಚುನಾವಣೆಯಲ್ಲಿ ಮೂರನೇ ಬಾರಿಗೆ ಎ.ಆರ್.ಕೃಷ್ಣಮೂರ್ತಿ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಎ.ಆರ್.ಕೆ ಅವರ ತಂದೆ ಮಾಜಿ ರಾಜ್ಯಪಾಲ ಬಿ.ರಾಚಯ್ಯನವರು ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.
ಜಿಲ್ಲೆಯಲ್ಲಿ ದಲಿತರ ಸಂಘಟನೆಗಳು, ಹಿಂದುಳಿದ ವರ್ಗಗಳು ಸಹಿತ ಎಲ್ಲ ಸಮುದಾಯಗಳ ವಿಶ್ವಾಸ ಹೊಂದಿರುವ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಎ.ಆರ್.ಕೆ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಬೆಳವಣಿಗೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಕೃಷ್ಣಮೂರ್ತಿ ಅವರ ತಂದೆ ಬಿ.ರಾಚಯ್ಯ ರಾಜಕೀಯ ಗುರುಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಬಾರಿ ಹೇಳಿಕೊಂಡಿದ್ದು, ರಾಚಯ್ಯನವರ ಸ್ಮಾರಕ ನಿರ್ಮಾಣಕ್ಕೆ ₹1 ಕೋಟಿ ಅನುದಾನ ನೀಡಿ ಉದ್ಘಾಟನೆ ಮಾಡಿದ್ದರು. ಇದೀಗ ಅವರ ಪುತ್ರನಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಹೊಂಗನೂರು ಚಂದ್ರು, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯೋಗೇಶ್, ಅಯ್ಯನಪುರ ಶಿವಕುಮಾರ್, ಬಿಳಿಗಿರಿರಂಗನಬೆಟ್ಟದ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್, ಚಾಮುಲ್ ನಿರ್ದೇಶಕ ರೇವಣ್ಣ, ಮುಖಂಡರಾದ ಪ್ರಭುಪ್ರಸಾದ್, ಸೋಮಣ್ಣ, ಮಹದೇವಪ್ರಸಾದ್ ಇದ್ದರು.
‘ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ’
‘ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಿ.ರಾಚಯ್ಯನವರ ಕೊಡುಗೆ ಅಪಾರವಾಗಿದ್ದು ಅವರ ಹೆಸರಿನಲ್ಲಿ ನಿರ್ಮಾಣವಾಗಿರುವ ಜೋಡಿ ರಸ್ತೆಯಲ್ಲಿ ಅವರ ಪುತ್ಥಳಿ ಸ್ವಾಗತ ಕಮಾನು ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಸೂಚನೆ ನೀಡಬೇಕು. ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಮಹದೇವ್ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.