ADVERTISEMENT

ಪ್ರಜಾಪ್ರಭುತ್ವ ದಿನಾಚರಣೆ| ಚಾಮರಾಜನಗರದಿಂದ ಬೆಂಗಳೂರಿಗೆ ರ‍್ಯಾಲಿ: ಶಾಸಕ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 2:27 IST
Last Updated 15 ಸೆಪ್ಟೆಂಬರ್ 2025, 2:27 IST
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಚಾಮರಾಜನಗರದಿಂದ ಬೆಂಗಳೂರಿಗೆ ಹೊರಟ ಬೈಕ್ ರ‍್ಯಾಲಿಗೆ ಭಾನುವಾರ ಜಿಲ್ಲಾಡಳಿತ ಭವನದ ಎದುರು ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಚಾಮರಾಜನಗರದಿಂದ ಬೆಂಗಳೂರಿಗೆ ಹೊರಟ ಬೈಕ್ ರ‍್ಯಾಲಿಗೆ ಭಾನುವಾರ ಜಿಲ್ಲಾಡಳಿತ ಭವನದ ಎದುರು ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು   

ಚಾಮರಾಜನಗರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ-ನನ್ನ ಹಕ್ಕು’ ಸಂದೇಶ ಸಾರುವ ಉದ್ದೇಶದೊಂದಿಗೆ ಚಾಮರಾಜನಗರದಿಂದ ಬೆಂಗಳೂರಿಗೆ ಹೊರಟ ಬೈಕ್ ರ‍್ಯಾಲಿಗೆ ಭಾನುವಾರ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ನೇತೃತ್ವದ ಬೈಕ್ ರ‍್ಯಾಲಿ ತಂಡಕ್ಕೆ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿ ‘ಬೆಂಗಳೂರಿನಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರತಿ ಜಿಲ್ಲೆಗಳಿಂದ 10 ಮಂದಿ ತಂಡ ಬೈಕ್ ಜಾಥಾದಲ್ಲಿ ತೆರಳುತ್ತಿದೆ’ ಎಂದರು.

ADVERTISEMENT

ಸಂವಿಧಾನ ರಚನೆಯ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟಿದ್ದಾರೆ. ಸಮಾನವಾಗಿ ಬದುಕುವ ಅವಕಾಶ ನೀಡಿದ್ದಾರೆ, ಎಲ್ಲ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳು ಸಂವಿಧಾನದಡಿ ದಕ್ಕಿದ್ದು ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ.15ರಂದು ಆಚರಿಸಲಾಗುತ್ತಿದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ಸ್ವಾತಂತ್ರ್ಯ ನಂತರ ದೇಶದ ಸಾಮಾಜಿಕ, ಅರ್ಥಿಕ ಸ್ಥಿತಿ ಸುಧಾರಿಸಿದ್ದು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತ ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಭಾರತ ಜಾಗತಿಕ ಮಟ್ಟದಲ್ಲಿ ಬೆಳೆಯಲು ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನ ಪ್ರಮುಖ ಕಾರಣವಾಗಿದೆ. ಸಂವಿಧಾನ ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ. ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣವಾಗಬೇಕಿದೆ ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಎಚ್.ಎಸ್.ಬಿಂದ್ಯಾ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ವೇದಿಕೆ ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹಾಗೂ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬೈಕ್‌ ರ‍್ಯಾಲಿ

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ನೇತೃತ್ವದಲ್ಲಿ ಚಾಮರಾಜನಗರದಿಂದ ಬೆಂಗಳೂರಿಗೆ ಬೈಕ್ ರ‍್ಯಾಲಿ ಹೊರಟಿದ್ದು ತಂಡದಲ್ಲಿ ಪೊಲೀಸ್ ಇಲಾಖೆಯ ಮಹಮದ್ ಫಾರೂಖ್ ರೋಟರಿ ಸಿಲ್ಕ್ ಸಿಟಿ ಸಹಾಯಕ ಗವರ್ನರ್‌ ಗಿರೀಶ್ ಸದಸ್ಯರಾದ ಶರತ್‌ ಕುಮಾರ್ ಬಸವರಾಜು ಮುರುಗೇಂದ್ರ ಸ್ವಾಮಿ ಮಹೇಶ್‌ ಕುಮಾರ್ ಕುಮಾರಸ್ವಾಮಿ ಎಸ್.ಮಹೇಶ್ ಶರತ್‌ ಕುಮಾರ್ ಇದ್ದಾರೆ. ಸುರಕ್ಷತೆಯ ದೃಷ್ಟಿ‌ಯಿಂದ ಭದ್ರತಾ ವಾಹನ ವೈದ್ಯರು ಶುಶ್ರೂಷಕರು ಸಹಾಯಕರು ಹಾಗೂ ಆಂಬುಲೆನ್ಸ್‌ ಜಾಥಾದಲ್ಲಿ ಹೊರಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.