ಚಾಮರಾಜನಗರ: ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಗುರುತಿಸಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ಈಚೆಗೆ ಕುಡಿಯುವ ನೀರಿನ ಸಮಸ್ಯೆ ನೀಗುವ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಿಇಒ ‘ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದರು.
ಇದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಕೂಡಲೇ ಪರ್ಯಾಯವಾಗಿ ನೀರು ಪೂರೈಸಲು ನೆರವಾಗಲಿದೆ. ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಭೆಗಳು ಕಾಲಕಾಲಕ್ಕೆ ನಡೆಸಬೇಕು. ಕುಡಿಯುವ ನೀರಿನ ಸ್ಥಾವರಗಳಾದ ಓವರ್ ಹೆಡ್ ಟ್ಯಾಂಕ್, ತೊಂಬೆಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡಬೇಕು, ಮೂರು ತಿಂಗಳಿಗೊಮ್ಮೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಸಬೇಕು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರು ಪೂರೈಕೆ ಸಂಬಂಧ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಪರಿಹಾರ ಕ್ರಮಗಳಿಗೆ ಮುಂದಾಗಬೇಕು. ವಿಶೇಷವಾಗಿ ಹನೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡಲಿದ್ದು ಟ್ಯಾಂಕರ್‌ಗಳ ಮೂಲಕ ನೀರು ಕೊಡಬೇಕು, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಬೇಕು ಎಂದು ತಾಕೀತು ಮಾಡಿದರು.
ಅರಣ್ಯ ಇಲಾಖೆಯಲ್ಲಿ ಬಾಕಿ ಇರುವ ಕುಡಿಯುವ ನೀರಿನ ಕಾಮಗಾರಿ ಪ್ರಸ್ತಾವಗಳಿಗೆ ಕಾಲಕಾಲಕ್ಕೆ ಪರಿವೇಶ್ ಪೋರ್ಟಲ್‌ನಲ್ಲಿ ಉತ್ತರಿಸಬೇಕು. ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಮತ್ತು ಸತ್ತೇಗಾಲ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ತೆಗೆದುಕೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸೂಚಿಸಿದರು.
‘ನೀರಿನ ಮಾದರಿ ಪರೀಕ್ಷೆಗೆ ಕಿಟ್’
ಜಿಲ್ಲೆಯ ಎಲ್ಲ 130 ಗ್ರಾಮ ಪಂಚಾಯಿತಿಗಳಿಗೆ ಎಫ್‌ಐಕೆ ಕಿಟ್‌ಗಳನ್ನು ವಿತರಿಸಿದ್ದು ನೀರಿನ ಮಾದರಿಗಳನ್ನು ಪರೀಕ್ಷಿಸಲು ತರಬೇತಿ ನೀಡಲಾಗಿದೆ. ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಿಟ್‌ಗಳ ಮೂಲಕ ಆಯಾ ವ್ಯಾಪ್ತಿಯ ಜಲಮೂಲಗಳನ್ನು ಪರೀಕ್ಷಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪ್ರಯೋಗಾಲಯಗಳಲ್ಲಿಯೂ ನೀರಿನ ಮಾದರಿ ಪರೀಕ್ಷೆಗೆ ಒಳಪಡಿಸಿ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.