ಹನೂರು: ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಮೇಡು ಗ್ರಾಮದ ಮಹಿಳೆಯರು ಹಾಗೂ ರೈತ ಸಂಘದ ಪದಾಧಿಕಾರಿಗಳು ಬಿಂದಿಗೆ ಹಿಡಿದು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ತಾಂಡಮೇಡು ಗ್ರಾಮದಿಂದ ಮಾರ್ಟಳ್ಳಿ ಕಚೇರಿಯವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಕಚೇರಿಗೆ ತೆರಳಿ ಖಾಲಿ ಬಿಂದಿಗೆ ಹಿಡಿದು ಅಧಿಕಾರಿಗಳು, ಸದಸ್ಯರ ವಿರುದ್ಧ ಧಿಕ್ಕಾರ ಕೂಗಿದರು. ನಮ್ಮ ಗ್ರಾಮದಲ್ಲಿ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಅಲ್ಲದೇ ಗ್ರಾಮದಲ್ಲಿರುವ ಬೋರ್‌ವೆಲ್ ಸಹ ಕೆಟ್ಟು ಹೋಗಿದ್ದು ಇನ್ನೂ ರಿಪೇರಿ ಮಾಡಿಸಿಲ್ಲ. ಈ ಸಂಬಂಧ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಈ ಭಾಗದಲ್ಲಿ ಆಗಾಗ್ಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಇದರಿಂದಾಗಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಅಲ್ಲದೇ ಇಲ್ಲಿನ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ನಿರತ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿ ಚೆನ್ನೇಶ್ ಭೇಟಿ ನೀಡಿ, ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಕೊಡಿಸಲು ಕ್ರಮ ವಹಿಸುತ್ತೇವೆ. ಜೊತೆಗೆ ನಿಮ್ಮ ಅಹವಾಲುಗಳನ್ನು ಸ್ವೀಕರಿಸಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ ಬಳಿಕ ಜನರು ಪ್ರತಿಭಟನೆಯಿಂದ ಕೈಬಿಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.