
ಚಾಮರಾಜನಗರ: ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ (ಕ.ರಾ.ಅ.ಪ.ವಿ.ಗು) ಸಂಘದ ಜಿಲ್ಲಾ ಸಮಿತಿಯು ಶನಿವಾರ (ಮಾರ್ಚ್ 2) ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಜಿ.ಎಂ.ಸುರೇಶ್, ‘ವರನಟ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಮತ್ತು ಸ್ಥಳೀಯ ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದಾರೆ. ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ಕ.ರಾ.ಅ.ಪ.ವಿ.ಗು.ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ’ ಎಂದರು.
‘ಕಾರ್ಯಕ್ರಮ ಆರಂಭಕ್ಕೂ ಮುನ್ನ ಚಾಮರಾಜೇಶ್ವರ ದೇವಸ್ಥಾನದಲ್ಲಿ ಗಣ್ಯರಿಂದ ಪೂಜೆ ಸಲ್ಲಿಸಿದ ಬಳಿಕ ತೆರದ ವಾಹನದಲ್ಲಿ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆಯಲ್ಲಿ ಕರೆತರಲಾಗುವುದು’ ಎಂದರು.
‘ಗುತ್ತಿಗೆದಾರರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಗುತ್ತಿಗೆ ನೌಕರರಿಗೆ ಸನ್ಮಾನ ಮಾಡಲಾಗುವುದು. ಇದೇ ವೇಳೆ ರಕ್ತದಾನ ಶಿಬಿರ, ಕಣ್ಣಿನ ಉಚಿತ ತಪಾಸಣಾ ಶಿಬಿರ, ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ನಾಗೇಂದ್ರ, ಕಾರ್ಯದರ್ಶಿ ಎಸ್.ಭಾನುಪ್ರಕಾಶ್, ಸಂಘಟನಾ ಕಾರ್ಯದರ್ಶಿ ಬಿ.ರವಿ, ಕೋಶಾಧ್ಯಕ್ಷ ಎಂ.ಎನ್.ಸಂಪತ್ ಕುಮಾರ್, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಉಮ್ಮತ್ತೂರು ಚಂದ್ರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.