ADVERTISEMENT

ಮಾದಪ್ಪನಿಗೆ ಎಣ್ಣೆ ಮಜ್ಜನ; ಭಕ್ತರ ದಂಡು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2023, 21:11 IST
Last Updated 13 ಅಕ್ಟೋಬರ್ 2023, 21:11 IST
ಮಹಾಲಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆದಿದ್ದು, ರಾತ್ರಿ ನಡೆದ ಚಿನ್ನದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
ಮಹಾಲಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆದಿದ್ದು, ರಾತ್ರಿ ನಡೆದ ಚಿನ್ನದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು   

ಮಹದೇಶ್ವರ ಬೆಟ್ಟ: ಮಹಾಲಯ ಅಮಾವಾಸ್ಯೆ ಜಾತ್ರೋತ್ಸವದ ಅಂಗವಾಗಿ ಇಲ್ಲಿನ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಮಲೆ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು.

ಶುಕ್ರವಾರ ನಸುಕಿನಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಿದ‌ವು. ಎಣ್ಣೆ ಮಜ್ಜನ , ಬಿಲ್ವಾರ್ಚನೆ, ಮಹಾ ಮಂಗಳಾರತಿ, ರುದ್ರಾಭಿಷೇಕ, ಪುಷ್ಪಾರ್ಚನೆ, ಗಂಧಾಭಿಷೇಕ, ವಿವಿಧ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು.

ಧರ್ಮ ದರ್ಶನವಲ್ಲದೆ ₹50, ₹100, ₹300 ಶುಲ್ಕದ ವಿಶೇಷ ಸರದಿ ಸಾಲಿನ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆ, ನೆರೆಯ ತಮಿಳುನಾಡಿನಿಂದಲೂ ಸಾವಿರಾರು ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ ಎಣ್ಣೆ ಮಜ್ಜನ ಸೇವೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು. ಇದಲ್ಲದೆ, ಬೆಳ್ಳಿ ತೇರು, ಬಸವ ವಾಹನ, ಹುಲಿವಾಹನ, ರುದ್ರಾಕ್ಷಿ ಮಂಟಪ ಉತ್ಸವ ನಡೆಸಿ ಹರಕೆ ತೀರಿಸಿದರು.

ADVERTISEMENT

ಇನ್ನೂ ಕೆಲವು ಭಕ್ತರು ಉರುಳು ಸೇವೆ, ಪಂಜಿನ ಸೇವೆ ಸೇರಿದಂತೆ ಇತರೆ ಉತ್ಸವಗಳಲ್ಲಿ ಪಾಲ್ಗೊಂಡರು. ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ ಭಕ್ತರ ಸಂಖ್ಯೆ ಹೆಚ್ಚಿತ್ತು. ಅಮಾವಾಸ್ಯೆ ದಿನವಾದ ಶನಿವಾರ ಮತ್ತು ಭಾನುವಾರ ಇನ್ನಷ್ಟು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಇದೆ.

ಕೆಎಸ್‌ಆರ್‌ಟಿಸಿಯು ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಿರುವುದರಿಂದ ಭಕ್ತರ ಪ್ರಯಾಣಕ್ಕೆ ತೊಂದರೆಯಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.