ADVERTISEMENT

ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣ: ಪರಿಸರ ಪ್ರೇಮಿಗಳ ವಿರೋಧ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 15:09 IST
Last Updated 8 ಏಪ್ರಿಲ್ 2025, 15:09 IST
   

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಾಲಯದ ಆವರಣದಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಯಲ್ಲಿ ಹಿಮವದ್‍ ಗೋಪಾಲಸ್ವಾಮಿ ದೇವಾಲಯ ಇದ್ದು, ಇಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿರುವುದು ಖಂಡನೀಯ. ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರು ಬೆಟ್ಟದ ತಪ್ಪಲಿನಲ್ಲಿರುವ ಪಾರ್ಕಿಂಗ್‌ ಜಾಗದಲ್ಲಿ ವಾಹನಗಳನ್ನು ನಿಲ್ಲಿಸಿ ಸಾರಿಗೆ ಬಸ್‌ಗಳಲ್ಲಿ ದೇವಾಲಯಕ್ಕೆ ತೆರಳುವ ನಿಯಮ ಜಾರಿಯಲ್ಲಿದೆ. ಹೀಗಿರುವಾಗ ಅರಣ್ಯ ಇಲಾಖೆ ಯಾವ ನಿಯಮದಡಿ ದೇವಸ್ಥಾನದ ಆವರಣದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿದೆ ಎಂದು ರೈತ ಮುಖಂಡ ಮಾದು ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ಚಿತ್ರತಂಡ ದೇವಾಲಯದ ಆವರಣದಲ್ಲಿ ಸಂಚಾರಿ ಯೂನಿಟ್‌ಗಳನ್ನು ಬಳಸಿಕೊಂಡು ದೊಡ್ಡ ಕ್ಯಾಮೆರಾ, ಪರದೆ ಬಳಸಿ ಚಿತ್ರೀಕರಣ ಮಾಡಿದೆ. ದೇಗುಲದ ಮೆಟ್ಟಿಲ ಬಳಿಯೇ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ವಾಹನಗಳನ್ನು ದೇಗುಲದ ಬಳಿ ಕೊಂಡೊಯ್ಯಲಾಗಿದೆ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಿರುವುದು ಖಂಡನೀಯ ಎಂದು ರೈತ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಹಂಗಳ ಮಾಧು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಚಿತ್ರೀಕರಣದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗೆ ಕರೆ ಮಾಡಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರದ ಖಜಾನೆ ತುಂಬಿಸಲೋ ಅಥವಾ ಇನ್ನಿತರ ಕಾರಣಗಳಿಗೆ ಪರಿಸರ ಸೂಕ್ಷ್ಮ ತಾಣಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿರುವುದು ಖಂಡನೀಯ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮಾಡ್ರಳ್ಳಿ ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಪಷ್ಟನೆ: ದೇವಾಲಯದ ಆವರಣದಲ್ಲಿ ಒಂದು ದಿನ ಚಿತ್ರೀಕರಣ ಮಾಡುವುದಕ್ಕೆ ಚಿತ್ರತಂಡ ಸರ್ಕಾರದಿಂದ ಅನುಮತಿ ಪಡೆದಿದ್ದಾರೆ. ಕಾಡಿನೊಳಗೆ ಸಿನಿಮಾ ಚಿತ್ರೀಕರಣ ಮಾಡಲು ಅರಣ್ಯ ಇಲಾಖೆಯಿಂದ ಅನುಮತಿ ನೀಡಲು ಅವಕಾಶವಿಲ್ಲ. ಸರ್ಕಾರದ ಮಟ್ಟದಲ್ಲಿ ಅನುಮತಿ ಪಡೆದು ಚಿತ್ರೀಕರಣ ಮಾಡಲಾಗಿದೆ ಎಂದು ಎಸಿಎಫ್ ನವೀನ್ ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.