ADVERTISEMENT

ಸಚಿವ ಸ್ಥಾನದ ಮೇಲೆ ಬಿಎಸ್‌ಪಿಯ ಉಚ್ಚಾಟಿತ ಶಾಸಕ ಎನ್‌.ಮಹೇಶ್‌ ಕಣ್ಣು?

ಕೊಳ್ಳೇಗಾಲ: ಕ್ಷೇತ್ರದಾದ್ಯಂತ ಬಿಜೆಪಿಗೆ ಸೇರ್ಪಡೆಯಾಗುವ ವದಂತಿ, ಚರ್ಚೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 15:24 IST
Last Updated 4 ಜನವರಿ 2021, 15:24 IST
ಎನ್.ಮಹೇಶ್
ಎನ್.ಮಹೇಶ್   

ಕೊಳ್ಳೇಗಾಲ: ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎನ್‌.ಮಹೇಶ್‌ ಅವರು ಈ ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಕ್ಷೇತ್ರದಾದ್ಯಂತ ದಟ್ಟವಾಗಿ ಹರಡಿದ್ದು, ಅವರ ಬೆಂಬಲಿಗರು ಹಾಗೂ ವಿರೋಧಿಗಳು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಎನ್‌.ಮಹೇಶ್‌ ಅವರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿಗೆ ಸೇರಿದ ನಂತರ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಅಲಂಕರಿಸಲಿದ್ದಾರೆ ಎಂದು ಅವರ ಬೆಂಬಲಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಸ್ತರಣೆಯ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ, ಶಾಸಕರ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿರುವುದು ಗಡಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕ್ಷೇತ್ರದ ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ADVERTISEMENT

ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸದನಕ್ಕೆ ಗೈರಾಗಿ, ಸರ್ಕಾರ ಪತನಕ್ಕೆ ಪರೋಕ್ಷವಾಗಿ ಕಾರಣವಾಗಿದ್ದ ಮಹೇಶ್‌ ಅವರು, ಆ ಬಳಿಕ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ.

ಯಡಿಯೂರಪ್ಪ ಹಾಗೂ ಅವರ ಸಂಪುಟದ ಸಚಿವರೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಶಾಸಕರು, ಸಾರ್ವಜನಿಕವಾಗಿ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕೊಳ್ಳೇಗಾಲಕ್ಕೆ ಐವರು ಸಚಿವರು ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರು ಬಂದಿದ್ದಾಗ, ಎನ್‌.ಮಹೇಶ್‌ ಅವರು ಎಲ್ಲರನ್ನೂ ಸ್ವಾಗತಿಸಿದ್ದು ಕೂಡ ಹಲವು ಊಹಾಪೋಹಗಳಿಗೆ ಎಡೆ ಮಾಡಿತ್ತು.

ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ತಮ್ಮ ಬೆಂಬಲಿಗರು ಹಾಗೂ ಬಿಜೆಪಿ ಸದಸ್ಯರ ನಡುವೆ ಮೈತ್ರಿ ಬೆಸೆಯುವಲ್ಲಿಯೂ ಶಾಸಕರು ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಶಾಸಕರು ಈ ತಿಂಗಳ ಅಂತ್ಯದಲ್ಲಿ ಬಿಜೆಪಿ ಸೇರುವುದು ಖಚಿತ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ನಾಲ್ಕು ತಿಂಗಳ ಕಾಲ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಮಹೇಶ್‌ ಅವರು, ಈಗ ಸಚಿವ ಸಂಪುಟ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಮಾಜ ಕಲ್ಯಾಣ ಅಥವಾ ಪೌರಾಡಳಿತ ಸಚಿವರಾಗುವ ಆಸೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ಉಸ್ತುವಾರಿ ಸಚಿವರಾಗುವ ಆಕಾಂಕ್ಷೆಯೂ ಅವರಿಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ನಿರ್ಧಾರ ಮಾಡಿಲ್ಲ

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಶಾಸಕ ಎನ್‌.ಮಹೇಶ್‌ ಅವರು, ‘ನಾನು ಎಲ್ಲ ಸಚಿವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇನೆ. ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಆದರೆ, ನಾನು ಯಾವಾಗಲೂಬಿಜೆಪಿ ಸರ್ಕಾರದ ಜೊತೆ ಇರುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.