ADVERTISEMENT

ಪಠ್ಯದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ: ಮಂಜುನಾಥ್ ಪ್ರಸನ್ನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 15:57 IST
Last Updated 1 ಆಗಸ್ಟ್ 2024, 15:57 IST
ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಸರ್ಕಾರಿ ಎಂ.ಸಂಗಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ್ ಪ್ರಸನ್ನ ಮಾತನಾಡಿದರು
ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಸರ್ಕಾರಿ ಎಂ.ಸಂಗಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ್ ಪ್ರಸನ್ನ ಮಾತನಾಡಿದರು   

ಸಂತೇಮರಹಳ್ಳಿ: ‘ಪಠ್ಯ ಚಟುವಟಿಕೆಗಳು ಮಾನಸಿಕ ಸಾಮರ್ಥ್ಯ ಹೆಚ್ಚಿಸಿದರೇ ಸಹಪಠ್ಯ ಚಟುವಟಿಕೆಗಳು ದೈಹಿಕ ಮತ್ತು ಸಾಂಸ್ಕೃತಿಕ ದೃಢತೆಯನ್ನು ನೀಡುತ್ತವೆ. ಈ ನಿಟಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಅವಶ್ಯಕ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ್ ಪ್ರಸನ್ನ ತಿಳಿಸಿದರು.

ಸಮೀಪದ ಕುದೇರು ಗ್ರಾಮದ ಸರ್ಕಾರಿ ಎಂ.ಸಂಗಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಕ್ರೀಡಾ, ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜತೆಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಉತ್ತಮಪಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟವಾದ ಗುರಿ ಮತ್ತು ಉದ್ದೇಶಗಳು ಇದ್ದಾಗ ಮಾತ್ರ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ. ಯಶಸ್ಸು ಗಳಿಸಬೇಕಾದರೇ ವಿದ್ಯಾರ್ಥಿಗಳು ಇಷ್ಟಪಟ್ಟು ಶ್ರಮ ವಹಿಸಿ ಓದಿನ ಕಡೆಗೆ ಹೆಚ್ಚಿನ ಗಮನ ನೀಡಿದಾಗ ಕಾಲೇಜಿಗೆ ಉತ್ತಮ ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡುವುದು ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿ ಸಮಾಜಮುಖಿಯಾಗಿ ಚಿಂತಿಸಿ ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿಟ್ಟುಕೊಂಡಾಗ ದೇಹ ಮತ್ತು ಮನಸ್ಸು ಆರೋಗ್ಯವಾಗಿರಲು ಸಾಧ್ಯ’ ಎಂದು ಹೇಳಿದರು.

ADVERTISEMENT

ಪ್ರಾಂಶುಪಾಲ ಕೆಂಡಗಣ್ಣಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಕಳೆದ ಸಾಲಿನ ಫಲಿತಾಂಶವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತಮಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ನಮ್ಮ ಕಾಲೇಜಿನಲ್ಲಿ ಉತ್ತಮ ಫಲಿತಾಂಶ ಬಂದಾಗ ಜಿಲ್ಲೆ ಫಲಿತಾಂಶ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರ ಮಾರ್ಗದರ್ಶನದಂತೆ ಹೆಚ್ಚಿನ ಅಭ್ಯಾಸ ಮಾಡಿ ಕಾಲೇಜಿಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಬೇಕು’ ಎಂದು ಹೇಳಿದರು.

ಕಳೆದ ಸಾಲಿನ ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಉಪನ್ಯಾಸಕರಾದ ನಾರಾಯಣಸ್ವಾಮಿ, ಮಂಜುನಾಥ್, ಪುಷ್ಪಲತಾ, ಶ್ರೀನಾಥ್, ಮಹೇಶ್ ರಾಜೇಅರಸ್, ಅಶ್ವಿನಿ, ಜೋಸೆಫ್, ರಾಜೇಂದ್ರ, ಪಲ್ಲವಿ, ಮಣಿಕಂಠ, ನಂದಿನಿ, ಗೀತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.