ADVERTISEMENT

ರೈತರ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ: ಆಕ್ರೋಶ

ಪಂಜಾಬ್‌, ಹರಿಯಾಣ ರೈತರ ಮೇಲೆ ದೌರ್ಜನ್ಯ ಖಂಡಿಸಿ ಅಣಕು ಶವಯಾತ್ರೆ, ಅರೆ ಬೆತ್ತಲೆ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 13:34 IST
Last Updated 23 ಫೆಬ್ರುವರಿ 2024, 13:34 IST
ಕೇಂದ್ರ ಸರ್ಕಾರ ದೆಹಲಿಯಲ್ಲಿ ಪೊಲೀಸರನ್ನು ಬಳಸಿಕೊಂಡು ರೈತರ ಹೋರಾಟವನ್ನು ಹತ್ತಿಕ್ಕುತ್ತಿ್ದೆ ಎಂದು ಆರೋಪಿಸಿ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಚಾಮರಾಜನಗರದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ನಡೆಸಿದರು
ಕೇಂದ್ರ ಸರ್ಕಾರ ದೆಹಲಿಯಲ್ಲಿ ಪೊಲೀಸರನ್ನು ಬಳಸಿಕೊಂಡು ರೈತರ ಹೋರಾಟವನ್ನು ಹತ್ತಿಕ್ಕುತ್ತಿ್ದೆ ಎಂದು ಆರೋಪಿಸಿ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಚಾಮರಾಜನಗರದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ನಡೆಸಿದರು   

ಚಾಮರಾಜನಗರ: ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಭುವನೇಶ್ವರಿ ವೃತ್ತದವರೆಗೂ ಕೇಂದ್ರ ಸರ್ಕಾರದ ಪ್ರತಿಕೃತಿಯ ಅಣಕು ಶವಯಾತ್ರೆ ನಡೆಸಿದರು. ವೃತ್ತದಲ್ಲಿ ಶವದ ಪ್ರತಿಕೃತಿಗೆ ಬೆಂಕಿ ಹಚ್ಚಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಕೃತಿಯನ್ನು ವಶಕ್ಕೆ ಪಡೆದು ಬೆಂಕಿ ಹಚ್ಚಲು ಅವಕಾಶ ನೀಡಲಿಲ್ಲ. 

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು, ತಮ್ಮ ಬಟ್ಟೆಗಳನ್ನು ಬಿಚ್ಚಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. 

ADVERTISEMENT

ಅಲ್ಲಿಂದ ಅರೆ ಬೆತ್ತಲೆಯಾಗಿಯೇ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

‘ದೇಶದ ರೈತರ ಪರವಾಗಿ ಹೋರಾಟ ಮಾಡುತ್ತಿರುವ ಪಂಜಾಬ್, ಹರಿಯಾಣ ರಾಜ್ಯಗಳ ರೈತರ ಮೇಲೆ ಕೇಂದ್ರ ಸರ್ಕಾರ ಪೊಲೀಸರ ಮೂಲಕ ದೌರ್ಜನ್ಯ ನಡೆಸುತ್ತಿದೆ. ಮಾನವ ಹಕ್ಕುಗಳನ್ನು ಧಮನ ಮಾಡುತ್ತಿದೆ. ಚಳವಳಿ ಮಾಡಲು ದೆಹಲಿಗೆ ತೆರಳುತ್ತಿದ್ದ ರೈತರನ್ನು ದೆಹಲಿ ಗಡಿಭಾಗದಲ್ಲಿ ಭಯೋತ್ಪಾದಕರನ್ನು ನಿಗ್ರಹಿಸುವ ರೀತಿಯಲ್ಲಿ ರೈತರನ್ನು ಬಗ್ಗು ಬಡಿಯಲಾಗುತ್ತಿದೆ’ ಎಂದು ದೂರಿದರು.

‘ಪೊಲೀಸರ ದಾಳಿಯಿಂದ ರೈತರು ಸಾಯುತ್ತಿದ್ದು ಈ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು. ಅಧಿಕಾರ ಬಲದಿಂದ ರೈತರ ಚಳವಳಿಯನ್ನು ನಾಶ ಮಾಡಲು ಸಾಧ್ಯವಿಲ್ಲ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರೈತರ ಮೇಲಿನ ದೌರ್ಜನ್ಯ ನಿಲ್ಲಿಸದಿದ್ದರೆ ದೇಶದಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ’ ಎಂದು ಎಚ್ಚರಿಸಿದರು. 

‘ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವ ಕಾನೂನು ಜಾರಿಗೊಳಿಸಬೇಕು. ದೇಶದ ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಯೋಜನೆ ಬದಲಾಗಿ ಪ್ರತಿ ರೈತನ ಹೊಲದ ಬೆಳೆ ವಿಮೆ ಜಾರಿಯಾಗಬೇಕು. ಒಂದೂವರೆ ವರ್ಷಗಳ ಕಾಲ ದೆಹಲಿ ಗಡಿಯಲ್ಲಿ ಹೋರಾಟ ಮಾಡಿ ಪ್ರಾಣ ಕಳೆದುಕೊಂಡ 750 ರೈತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಬೇಕು’ ಎಂದೂ ಪ್ರತಿಭಟನಕಾರರು ಆಗ್ರಹಿಸಿದರು.  

ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಉಡಿಗಾಲ ರೇವಣ್ಣ, ಪಟೇಲ್ ಶಿವಮೂರ್ತಿ, ಮೂಕಹಳ್ಳಿ ಮಹದೇವಸ್ವಾಮಿ, ದೇವರಾಜು, ಕಿರಗಸೂರು ಶಂಕರ್, ಸತೀಶ್, ಸಿದ್ದೇಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.