
ಚಾಮರಾಜನಗರ: ಮಳೆ ಆಶ್ರಿತ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸರ್ಕಾರಗಳು ನಿಗದಿಪಡಿಸಿರುವ ಬೆಳೆ ಹಾನಿ ಪರಿಹಾರ ಮೊತ್ತ ಅವೈಜ್ಞಾನಿಕವಾಗಿದ್ದು ಕೂಡಲೇ ಎನ್‌ಡಿಆರ್‌ಆಫ್ ಮಾನದಂಡ ಪರಿಷ್ಕರಿಸಿ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಶುಕ್ರವಾರ ರೈತರು ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ರೈತರು ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅತಿ ವೃಷ್ಟಿ ಹಾಗೂ ಅನಾವೃಷ್ಟಿ ಬೆಳೆ ನಷ್ಟ ಪರಿಹಾರ ಅವೈಜ್ಞಾನಿಕವಾಗಿದೆ. ಮಳೆ ಆಶ್ರಿತ ಬೆಳೆ ನಷ್ಟವಾದರೆ ಎಕರೆ ಕನಿಷ್ಠ ₹ 25,000, ನೀರಾವರಿ ತೋಟಗಾರಿಕೆ ಬೆಳೆಗಳಿಗೆ ಎಕರೆಗೆ ಕನಿಷ್ಠ ₹ 40,000, ವಾಣಿಜ್ಯ ಬೆಳೆಗಳಿಗೆ ಎಕರೆಗೆ ₹ 60,000 ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಎನ್‌ಡಿಆರ್‌ಎಫ್ ಪರಿಹಾರ ಧನ ಎಂಟು ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ. ಕೂಡಲೇ ಕೇಂದ್ರ ಸರ್ಕಾರ ದರ ಪರಿಷ್ಕರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಪಂಜಾಬ್ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಅತಿವೃಷ್ಟಿ ಪ್ರದೇಶಗಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳೆ ನಷ್ಟವಾದ ರೈತರ ಸಾಲ ಮನ್ನಾ ಮಾಡಬೇಕು, ಸಕ್ಕರೆ ಕಾರ್ಖಾನೆಗಳ ಉಪ ಉತ್ಪನ್ನಗಳ ಲಾಭವನ್ನು ರೈತರಿಗೆ ಹಂಚಿಕೆ ಮಾಡಬೇಕು. ಕಬ್ಬಿಗೆ ಹೆಚ್ಚುವರಿ ರಾಜ್ಯ ಸಲಹಾ ಬೆಲೆ ನಿಗದಿ ಮಾಡಬೇಕು. ಕಬ್ಬಿನ ತೂಕದಲ್ಲಿನ ಮೋಸ ತಪ್ಪಿಸಲು ಸಕ್ಕರೆ ಕಾರ್ಖಾನೆಗಳ ಮುಂಭಾಗ ತೂಕದ ಯಂತ್ರ ಸ್ಥಾಪಿಸಬೇಕು. ಭತ್ತ ಕ್ವಿಂಟಲ್‌ಗೆ ₹ 2,369 ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ₹ 500 ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾ ಕಾರ್ಯಾಧ್ಯಕ್ಷ ರೇವಣ್ಣ ಉಡಿಗಾಲ, ಉಪಾಧ್ಯಕ್ಷ ಮೂಡಲಪುರ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಎಚ್.ಮೂಕಳ್ಳಿ ಮಹದೇವಸ್ವಾಮಿ, ಶಿವಕುಮಾರ್, ಆಲೂರು ಸಿದ್ದರಾಜು, ತಾಲ್ಲೂಕು ಅಧ್ಯಕ್ಷ ನಂಜೇದೇವನಪುರ ಸತೀಶ್, ಉಪಾಧ್ಯಕ್ಷ ಹೆಗ್ಗೊಠಾರ ಶಿವಸ್ವಾಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.