ADVERTISEMENT

ಚಾಮರಾಜನಗರ: ರೈತರ ಚಳವಳಿ ತಾತ್ಕಾಲಿಕವಾಗಿ ವಾಪಸ್

ಪ್ರತಿಭಟನ ನಿರತರ ಮನವೊಲಿಸಿದ ಶಾಸಕ ಎನ್‌.ಮಹೇಶ್‌, ಸಮಸ್ಯೆ ಬಗೆಹರಿಸುವ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 16:48 IST
Last Updated 27 ಸೆಪ್ಟೆಂಬರ್ 2021, 16:48 IST
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಸೋಮವಾರ ಜಿಲ್ಲಾಡಳಿತ ಭವನದ ಎದುರು 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಸೋಮವಾರ ಜಿಲ್ಲಾಡಳಿತ ಭವನದ ಎದುರು 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು   

ಚಾಮರಾಜನಗರ: ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶರವಣನ್‌ ಅವರು ರೈತ ಸಂಘಟನೆಗಳು ಹಾಗೂ ರೈತ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಅವರನ್ನು ರಾಜ್ಯದಿಂದ ಹೊರಗಡೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ 15 ದಿನಗಳಿಂದ ಜಿಲ್ಲಾಡಳಿತ ಭವನದಲ್ಲಿ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು ಸೋಮವಾರ ತಮ್ಮ ಚಳವಳಿಯನ್ನು ತಾತ್ಕಾಲಿಕವಾಗಿ ವಾಪಸ್‌ ಪಡೆದಿದ್ದಾರೆ.

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಸೋಮವಾರ ಸಂಜೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತ ಮುಖಂಡರ ಮನವೊಲಿಸಲು ಯತ್ನಿಸಿದರು. ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆದುಕೊಂಡು ಬಂದು ಈ ವಿಚಾರವಾಗಿ ಸಭೆ ಆಯೋಜಿಸಿ ಅಕ್ಟೋಬರ್‌ 20ರೊಳಗೆ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂಬ ಭರವಸೆಯನ್ನು ಶಾಸಕರು ರೈತ ಮುಖಂಡರಿಗೆ ನೀಡಿದರು. ಅವರ ಮನವಿಗೆ ಸ್ಪಂದಿಸಿದ ಚಳವಳಿಗಾರರು, ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದರು.

‘ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ರಾಷ್ಟ್ರಪತಿ ಅವರ ಕಾರ್ಯಕ್ರಮ ಮುಗಿದ ನಂತರ ರೈತ ಮುಖಂಡರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಅವರು ಹೇಳಿದ್ದಾರೆ. ನೀವು ಪ್ರತಿಭಟನೆ ಕೈ ಬಿಡಿ. ನಾನು ನಿಮ್ಮ ಪರವಾಗಿ ಇರುತ್ತೇನೆ. ಸಚಿವರನ್ನು ಕರೆದುಕೊಂಡು ಬಂದು ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ’ ಎಂದು ಎನ್‌.ಮಹೇಶ್‌ ಅವರು ಹೇಳಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಟನನಿರತರು ‘ಅ.10ರೊಳಗೆ ಬಗೆಹರಿಸಿಕೊಡಿ’ ಎಂದು ಒತ್ತಾಯಿಸಿದರು. ‘ನಾನು ಪ್ರಯತ್ನಿಸುತ್ತೇನೆ. ಅ.15ರಿಂದ 20ರೊಳಗೆ ಖಂಡಿತವಾಗಿಯೂ ಸಮಸ್ಯೆ ಬಗೆಹರಿಸುತ್ತೇನೆ’ ಎಂದು ಶಾಸಕರು ಹೇಳಿದಾಗ, ‘ನಿಮ್ಮ ಮಾತಿಗೆ ಬೆಲೆ ಕೊಟ್ಟು, ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಡುತ್ತೇವೆ. ಒಂದು ವೇಳೆ ನೀವು ಸಮಸ್ಯೆ ಬಗೆಹರಿಸದಿದ್ದರೆ, ನಿಮ್ಮ ಮನೆ ಮುಂದೆಯೇ ಪ್ರತಿಭಟನೆ ನಡೆಸುತ್ತೇವೆ’ ಎಂದು ರೈತ ಮುಖಂಡರು ಹೇಳಿದರು.

ಈ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಅವರು, ‘ಅ.20ರ ಒಳಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಆಯೋಜಿಸಿ ಬಿಕ್ಕಟ್ಟನ್ನು ಇತ್ಯರ್ಥಪಡಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದ್ದಾರೆ. ಹೀಗಾಗಿ ತಾತ್ಕಾಲಿಕವಾಗಿ ಪ್ರತಿಭಟನೆ ಸ್ಥಗಿತಗೊಳಿಸಿದ್ದೇವೆ. ಸಭೆಯಲ್ಲಿ ಏನೂ ತೀರ್ಮಾನವಾಗುತ್ತದೆ ಎಂಬುದನ್ನು ನೋಡಿಕೊಂಡು ಮುಂದಿನ ನಿರ್ಧಾರವನ್ನು ನಾವು ತೆಗೆದುಕೊಳ್ಳುತ್ತೇವೆ. ಆದರೆ, ನಮ್ಮ ಬೇಡಿಕೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ’ ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಬ್ಬಸೂರು ಬಸವಣ್ಣ, ರೈತ ಮುಖಂಡರಾದ ಹೊನ್ನೂರು ಬಸವಣ್ಣ, ಹಾಡ್ಯ ರವಿ ಸೇರಿದಂತೆ ಹಲವರು ಇದ್ದರು.

ಅ.7ರಂದು ಜಿಲ್ಲೆಗೆ ಸಿ.ಎಂ: ಮಹೇಶ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.7ಕ್ಕೆ ಜಿಲ್ಲೆಗೆ ಬಂದೇ ಬರುತ್ತಾರೆ ಎಂದು ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಹೇಳಿದರು.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಅ.7ರಂದು ರಾಷ್ಟ್ರಪತಿ ಅವರು ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಅವರು ಜೊತೆಗೆ ಇರಲಿದ್ದಾರೆ. ಅಲ್ಲಿಂದ ನಗರದಲ್ಲಿ ನಡೆಯುವ ಆಸ್ಪತ್ರೆ ಉದ್ಘಾಟನೆಗೆ ಅವರು ಬರಲಿದ್ದಾರೆ. ಸ್ವತಃ ಮುಖ್ಯಮಂತ್ರಿ ಅವರೇ ಬರುವುದಾಗಿ ಹೇಳಿದ್ದಾರೆ. ಇದರಲ್ಲಿ ಸಂಶಯವೇ ಬೇಡ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.