ADVERTISEMENT

ಗಾಂಧಿ ಆದರ್ಶ ಅನುಕರಣೀಯ

ಜಿಲ್ಲೆಯಾದ್ಯಂತ ಮಹಾತ್ಮ ಗಾಂಧಿ ಸ್ಮರಣೆ; ಜಿಲ್ಲಾಧಿಕಾರಿ ಕಚೇರಿಯಲ್ಲಿ ಗೀತಗಾಯನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 3:32 IST
Last Updated 3 ಅಕ್ಟೋಬರ್ 2021, 3:32 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಾಂಧಿ ಜಯಂತಿಯಲ್ಲಿ ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಅವರು ಮಾತನಾಡಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ, ಚುಡಾ ಅಧ್ಯಕ್ಷ ಶಾಂತಮೂರ್ತಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಇತರರು ಇದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಾಂಧಿ ಜಯಂತಿಯಲ್ಲಿ ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಅವರು ಮಾತನಾಡಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ, ಚುಡಾ ಅಧ್ಯಕ್ಷ ಶಾಂತಮೂರ್ತಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಇತರರು ಇದ್ದರು.   

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಷ್ಟ್ರಪತಿ ಮಹಾತ್ಮಗಾಂಧೀಜಿ ಅವರ 153ನೇ ಜನ್ಮದಿನವನ್ನು ನಗರದಲ್ಲಿ ಸರಳವಾಗಿ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಗಾಂಧೀಜಿಯವರಿಗೆ ಪ್ರಿಯವಾಗಿದ್ದ ವೈಷ್ಣವ ಜನತೊ, ರಘುಪತಿ ರಾಘವ ರಾಜಾರಾಂ ಗೀತಗಾಯನವನ್ನು ಕಲಾವಿದರಾದ ಬಸವರಾಜು, ಮಂಜುನಾಥ್ ಅವರು ನಡೆಸಿಕೊಟ್ಟರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ‌ ‘ಎಲ್ಲರನ್ನೂ ಒಗ್ಗೂಡಿಸಿ ಶಾಂತಿಯುತ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಅವರ ಕೊಡುಗೆ ಅಪಾರವಾಗಿದೆ. ಹಲವು ಮಹತ್ತರ ಚಳವಳಿಗಳನ್ನು ನಡೆಸಿ ಅಹಿಂಸೆ ತತ್ವವನ್ನು ಪಾಲಿಸಿ ಭಾರತ ಸ್ವಾತಂತ್ರ್ಯಗಳಿಸಲು ಹೋರಾಡಿದ ಮಹಾತ್ಮ ಗಾಂಧೀಜಿ ಅವರ ಬದುಕು ಅರ್ಥಪೂರ್ಣವಾದದ್ದು’ ಎಂದರು.

ADVERTISEMENT

‘ದುಡಿಮೆ ಮಹತ್ವವನ್ನು ಸಾರಿದ ಗಾಂಧೀಜಿ ಅವರು ಶಿಕ್ಷಣ ಕ್ರಮಕ್ಕೆ ವಿಶೇಷ ಒತ್ತು ನೀಡಿದರು. ಶಿಕ್ಷಣ ಕುರಿತು ಗಾಂಧೀಜಿ ಅವರ ಹೊಂದಿದ್ದ ಚಿಂತನೆಗಳು ಸಾರ್ವಕಾಲಿಕವಾಗಿವೆ. ಸಪ್ತ ಸೂತ್ರಗಳ ಪ್ರತಿಪಾದನೆ ಮಾಡಿದ ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ.ಶಾಂತಮೂರ್ತಿ ಕುಲಗಾಣ ಅವರು ಮಾತನಾಡಿ ‘ಗಾಂಧೀಜಿ ಅವರ ಪರಿಸರ ಕಾಳಜಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ಅನೇಕ ದುಶ್ಚಟಗಳನ್ನು ಕೈಬಿಡಲು ಗಾಂಧಿ ಅವರು ಮಾಡಿದ ಮಾರ್ಗದರ್ಶನ ಇಂದೂ ಪ್ರಸ್ತುತವಾಗಿವೆ. ಮುಂದಿನ ಪೀಳಿಗೆಗೂ ಗಾಂಧಿ ಅವರ ತತ್ವ ಆದರ್ಶಗಳನ್ನು ಕೊಂಡೊಯ್ಯುವ ಹೊಣೆಗಾರಿಕೆ ಎಲ್ಲರದ್ದಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಸರ್ವಧರ್ಮ ಗುರುಗಳು ಪ್ರಾರ್ಥನೆ ನಡೆಸಿ ಸಂದೇಶ ನೀಡಿದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹರ್ಷಲ್ ಭೋಯರ್‌ ನಾರಾಯಣ ರಾವ್, ನಗರಸಭೆ ಅಧ್ಯಕ್ಷ ಸಿ.ಎಂ.ಆಶಾ, ಉಪಾಧ್ಯಕ್ಷೆ ಪಿ.ಸುಧಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೆಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್.ಕೆ.ಗಿರೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.