ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಸಂಬಂಧಿಸಿದ ಜಿಲ್ಲಾಮಟ್ಟದ ಮೇಲ್ವಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಮೂಲಸೌಕರ್ಯ ಒದಗಿಸಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷಾ ಕಾರ್ಯವನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿದೆ.
ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಲ್ಳಬೇಕು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ಮೇಲ್ವಿಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿಯನ್ನು ಸಮೀಕ್ಷಾ ಕಾರ್ಯಕ್ಕೆ ರಚಿಸಲಾಗಿದ್ದು ಯಾವ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ವಂಚಿತರಾಗದಂತೆ ಸಮಿತಿಯು ನೋಡಿಕೊಳ್ಳಬೇಕು. ಸಮೀಕ್ಷಾ ಕಾರ್ಯಕ್ಕೆ ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸುವುದರ ಮೂಲಕ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿರುವ ದಮನಿತ ಮಹಿಳೆಯರು, ಎಚ್.ಐ.ವಿ ಬಾಧಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ವಿಶೇಷ ಕಾರ್ಯಕ್ರಮ ರೂಪಿಸಬೇಕು. ಅವರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ ಜೀವನ ಭದ್ರತೆಗೆ ಅವಕಾಶ ಮಾಡಿಕೊಡಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಬ್ಯಾಂಕ್ ಸಾಲಸೌಲಭ್ಯಗಳು ದೊರೆಯುವಲ್ಲಿ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆ ಹಾಗೂ ನಿವೇಶನಗಳನ್ನು ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸುರೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹಮದ್ ಅಕ್ಬರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸುರೇಖಾ, ಜಿಲ್ಲಾಮಟ್ಟದ ಅಧಿಕಾರಿಗಳು, ಸ್ನೇಹಜ್ಯೋತಿ ಹಾಗೂ ಸಮತಾ ಸೊಸೈಟಿ ಸೇರಿದಂತೆ ವಿವಿಧ ಸಂಘಸAಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
‘ವಿಶೇಷ ಯೋಜನೆ ವರ್ಗ ಎಂದು ನಮೂದಿಸಿ’
ವಸತಿ ಯೋಜನೆಗಳಡಿ ಎಚ್.ಐ.ವಿ ಸೋಂಕಿತರಿಗೆ ಮನೆಗಳನ್ನು ಮಂಜೂರು ಮಾಡುವಾಗ ಆದೇಶದಲ್ಲಿ ಎಚ್.ಐ.ವಿ ಬಾಧಿತರು ಎಂದು ನಮೂದಿಸುವ ಬದಲಾಗಿ ವಿಶೇಷ ಯೋಜನೆಯ ವರ್ಗ ಎಂದು ನಮೂದಿಸಬೇಕು ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳಿಗೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.