ADVERTISEMENT

ಕಾರ್ಯಕರ್ತರಿಗೆ ಶಕ್ತಿ ತುಂಬಲು ಗ್ರಾಮ ಸ್ವರಾಜ್ಯ: ನಂಜುಂಡಸ್ವಾಮಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 13:45 IST
Last Updated 30 ನವೆಂಬರ್ 2020, 13:45 IST
ಜಿ.ಎನ್.ನಂಜುಂಡಸ್ವಾಮಿ
ಜಿ.ಎನ್.ನಂಜುಂಡಸ್ವಾಮಿ   

ಚಾಮರಾಜನಗರ: ಗ್ರಾಮ ಪಂಚಾಯಿತಿ ಚುನಾವಣೆ ಎಂದರೆ ಅದು ಕಾರ್ಯಕರ್ತರ ಚುನಾವಣೆ. ಅವರಲ್ಲಿ ಒಗ್ಗಟ್ಟು ಮೂಡಿಸಿ, ಶಕ್ತಿ ತುಂಬುವುದಕ್ಕಾಗಿ ಪಕ್ಷವು ಗ್ರಾಮ ಸ್ವರಾಜ್ಯ ಸಮಾವೇಶ ಹಮ್ಮಿಕೊಂಡಿದೆ’ ಎಂದು ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಜಿ.ಎನ್‌.ನಂಜುಂಡಸ್ವಾಮಿ ಅವರು ಹೇಳಿದರು.

ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆಯಲ್ಲಿ ಮಂಗಳವಾರ (ಡಿ.1) ಆಯೋಜಿಸಲಾಗಿರುವ ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಗ್ರಾಮ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸ ಮಾಡಬೇಕು. ವಿಧಾನಸಭೆ, ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಅವರು ಶ್ರಮ ವಹಿಸುತ್ತಾರೆ. ಗ್ರಾಮ ಪಂಚಾಯಿತಿ ಚುನಾವಣೆ ಅವರಿಗಾಗಿ ಇರುವುದು. ಈ ಸಂದರ್ಭದಲ್ಲಿ ಮುಖಂಡರು ಅವರ ಬೆಂಬಲಕ್ಕೆ ನಿಲ್ಲಬೇಕು ಎಂಬ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ’ ಎಂದರು.

‘ ಗ್ರಾಮ ಸ್ವರಾಜ್ಯದ ಅಡಿಯಲ್ಲಿ ರಾಜ್ಯದಾದ್ಯಂತ ಕಾರ್ಯಕರ್ತರ ಸಮಾವೇಶವನ್ನು ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆ, ಕಾರ್ಯಕ್ರಮಗಳನ್ನು ವಿವರಿಸಲಾಗುವುದು’ ಎಂದರು.

ADVERTISEMENT

‘ಈ ಸಮಾವೇಶದಲ್ಲಿ ಗ್ರಾಮ ಪಂಚಾಯಿತಿಯ ಹಿಂದಿನ ಅಧ್ಯಕ್ಷರು ಸದಸ್ಯರು, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರಗಳ ಪ್ರತಿನಿಧಿಗಳು, ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್‌ ಅವರು ಮಾತನಾಡಿ, ‘ಮಂಗಳವಾರ (ಡಿ.1)ಬೆಳಿಗ್ಗೆ 10.30ಕ್ಕೆ ಕೊಳ್ಳೇಗಾಲ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಹಾಗೂ ಮಧ್ಯಾಹ್ನ 2.30ಕ್ಕೆ ಗುಂಡ್ಲುಪೇಟೆಯ ಅಂಬೇಡ್ಕರ್‌ ಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಮೈಸೂರು ಭಾಗದ ಐದು ಜಿಲ್ಲೆಗಳನ್ನು ಒಳಗೊಂಡಂತೆ ಕಂದಾಯ ಸಚಿವ ಆರ್.ಅಶೋಕ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದ್ದು, ಇಡೀ ತಂಡ ಸಮಾವೇಶದಲ್ಲಿ ಭಾಗವಹಿಸಲಿದೆ. ಸಚಿವರಾದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಜಿಲ್ಲೆಯ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ, ಪೌರಾಡಳಿತ ಸಚಿವ ನಾರಾಯಣ ಗೌಡ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಭಾಗವಹಿಸಲಿದ್ದಾರೆ’ ಎಂದರು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೃಷಬೇಂದ್ರಪ್ಪ, ಮುಖಂಡ ಹನುಮಂತಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.