ADVERTISEMENT

ಕೋವಿಡ್‌: ಜಿಲ್ಲಾಧಿಕಾರಿ, ತಹಶೀಲ್ದಾರ್‌ ಗ್ರಾಮ ವಾಸ್ತವ್ಯ ರದ್ದು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 11:39 IST
Last Updated 16 ಏಪ್ರಿಲ್ 2021, 11:39 IST

ಚಾಮರಾಜನಗರ: ಕೋವಿಡ್‌ ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ತಾಲ್ಲೂಕಿನ ಹರದನಹಳ್ಳಿ ಹೋಬಳಿಯ ಅಮಚವಾಡಿ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ (ಏ.17) ನಿಗದಿಯಾಗಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರ ಗ್ರಾಮ ವಾಸ್ತವ್ಯವನ್ನು ರದ್ದುಪಡಿಸಲಾಗಿದೆ.

ಅದೇ ರೀತಿ, ಕೊಳ್ಳೇಗಾಲ ತಾಲ್ಲೂಕಿನ ಕಸಬಾ ಹೋಬಳಿಯ ಕರಳಕಟ್ಟೆದೊಡ್ಡಿ, ಯಳಂದೂರು ತಾಲ್ಲೂಕಿನ ಅಗರ ಹೋಬಳಿಯ ಮದ್ದೂರು ಗ್ರಾಮ, ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಹೋಬಳಿಯ ಬೈಲೂರು ಗ್ರಾಮ, ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಹೋಬಳಿಯ ಮಾದಾಪಟ್ಟಣ ಗ್ರಾಮಗಳಲ್ಲಿ ಶನಿವಾರ ನಡೆಯಬೇಕಿದ್ದ ಆಯಾ ತಾಲ್ಲೂಕಿನ ತಹಶಿಲ್ದಾರರ ಗ್ರಾಮ ವಾಸ್ತವ್ಯ ಕೂಡ ರದ್ದಾಗಿದೆ.

ಸರ್ಕಾರದ ಸೂಚನೆಯ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ADVERTISEMENT

‘ರಾಜ್ಯದಾದ್ಯಂತ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರುವುದನ್ನು ತಡೆಗಟ್ಟಲು ಹಾಗೂ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಪ್ರಿಲ್ ತಿಂಗಳ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ, ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಸೂಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೀಗಾಗಿ, ಏಪ್ರಿಲ್‌ 17 ರಂದು ನಿಗದಿಯಾಗಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.