ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 2:39 IST
Last Updated 27 ಅಕ್ಟೋಬರ್ 2025, 2:39 IST
ಗುಂಡ್ಲುಪೇಟೆ ಪಟ್ಟಣದ ಎಂಡಿಸಿಸಿ ಬ್ಯಾಂಕ್ ಸರ್ಕಲ್ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು
ಗುಂಡ್ಲುಪೇಟೆ ಪಟ್ಟಣದ ಎಂಡಿಸಿಸಿ ಬ್ಯಾಂಕ್ ಸರ್ಕಲ್ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು   

ಗುಂಡ್ಲುಪೇಟೆ: ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧನ ಪ್ರತಿಮೆ ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಎಂಡಿಸಿಸಿ ಬ್ಯಾಂಕ್ ಸರ್ಕಲ್ ಮುಂದೆ ಜಮಾವಣೆಗೊಂಡ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು, ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಿಸಿ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧನ ಪ್ರತಿಮೆ ಒಡೆದು ಹಾಕಿರುವುದು ಖಂಡನೀಯ. ಪೊಲೀಸ್‌ ಇಲಾಖೆ ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ, ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮಹಾನ್ ನಾಯಕರ ಭಾವಚಿತ್ರ, ಪ್ರತಿಮೆಗಳನ್ನು ವಿರೂಪಗೊಳಿಸುವ ಮನಸ್ಥಿತಿಗಳು ಸಮಾಜದಲ್ಲಿ ಇರುವುದು ನಾಚಿಕೆಗೇಡಿನ ಸಂಗತಿ. ಇಂಥವರಿಂದ ಗ್ರಾಮಗಳಲ್ಲಿ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿದೆ. ಸ್ವಾಸ್ಥ್ಯ ಹಾಳಾಗುತ್ತದೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಘಟನೆಗಳನ್ನು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮರುಕಳಿಸದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕೆಂದು ಒತ್ತಾಯಿಸಿದರು.

ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಿವಣ್ಣ, ಉಪಾಧ್ಯಕ್ಷ ನಾಗರಾಜು, ವೀರನಪುರ ನಾಗರಾಜಪ್ಪ, ಮುಂಟೀಪುರ ಮಹದೇವಸ್ವಾಮಿ, ಬಸವೇಶ್, ಚಂದ್ರು, ಪುತ್ತನಪುರ ಮನು, ಗನಗನಹಳ್ಳಿ ನಾಗರಾಜು ಸೇರಿ ಹಲವು ರೈತ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.