ಗುಂಡ್ಲುಪೇಟೆ: ‘ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು’ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಸಲಹೆ ನೀಡಿದರು.
ಪಟ್ಟಣದ ಸಂಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಟದ ಮೈದಾನದಲ್ಲಿ ನಡೆದ 2025–26ನೇ ಸಾಲಿನ ಗುಂಡ್ಲುಪೇಟೆ ಟೌನ್ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ‘ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪೂರಕವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸೋಲು–ಗೆಲುವಿನ ಬಗ್ಗೆ ಚಿಂತಿಸದೆ ಭಾಗವಹಿಸುವ ಅಭ್ಯಾಸ ರೂಢಿಸಿಕೊಳ್ಳಿ’ ಎಂದು ತಿಳಿಸಿದರು.
ಕ್ರೀಡೆಯಿಂದ ಆರೋಗ್ಯ ವೃದ್ಧಿಯಾಗುವ ಜೊತೆಗೆ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ತಾಲ್ಲೂಕಿನಲ್ಲಿ ಕ್ರೀಡಾಚಟುವಟಿಕೆಗಳಿಗೆ ಪೂರಕವಾದ ಕ್ರೀಡಾಂಗಣ, ಮೂಲಸೌಲಭ್ಯ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಇದ್ದಾರೆ. ಆದ್ದರಿಂದ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು.
‘ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಸುತ್ತುಗೋಡೆ ನಿರ್ಮಾಣ ಆಗುತ್ತಿದೆ. ಇತರೆ ಸೌಲಭ್ಯಗಳನ್ನು ಒದಗಿಸುವ ಸಂಬಂಧ ಕ್ರಮವಹಿಸಲಾಗುವುದು. ತಾಲ್ಲೂಕಿನಲ್ಲಿ ನಡೆಯುವ ಎಲ್ಲಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ. ಶಾಲಾ ಮಕ್ಕಳು ಈಗಿನಿಂದಲೇ ದೊಡ್ಡ ಗುರಿಯೊಂದು ಅಭ್ಯಾಸದಲ್ಲಿ ತೊಡಗಿಸಿಕೊಳ್ಳಿ. ಉತ್ತಮ ಕ್ರೀಡಾ ಸಾಧನೆ ಮಾಡಿ’ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಾಲಿಬಾಲ್ ಅಂತರರಾಷ್ಟ್ರೀಯ ಕ್ರೀಡಾಪಟು ದುಂದಾಸನಪುರದ ತೇಜಶ್ವಿನಿ ಜತ್ತಿ, ಪುರಸಭಾ ಅಧ್ಯಕ್ಷ ಜಿ.ಎಸ್.ಮಧುಸೂದನ್, ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ದೈಹಿಕ ಶಿಕ್ಷಣ ಪರಿವೀಕ್ಷಕ ಚಿಕ್ಕಮಲ್ಲಪ್ಪ, ದೈಹಿಕ ಶಿಕ್ಷಣ ಶಿಕ್ಷಕರಾದ ಮಲ್ಲನಾಯಕ, ಸಿದ್ದಶೆಟ್ಟಿ, ಶಾಂತಮಲ್ಲೇಶ್, ಎಂ.ಸಿ.ಮಹೇಶ್, ಸ್ವಾಮಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.