ಹನೂರು: ‘ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವನಿಟ್ಟಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಶಾಸಕ ಎಂ. ಆರ್ ಮಂಜುನಾಥ್ ಶನಿವಾರ ರೈತರಿಗೆ ತಿಳಿಸಿದರು.
ಪಟ್ಟಣದಲ್ಲಿ ಸಾಮೂಹಿಕ ನಾಯಕತ್ವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಂಘದ ಮುಖಂಡರ ಜತೆ ಸಭೆಯಲ್ಲಿ ಸಮಸ್ಯೆಗಳನ್ನು ಆಲಿಸಿದ ಬಳಿಕೆ ಈ ಭರವಸೆ ನೀಡಿದರು.
‘ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಿನ ಸಮಸ್ಯೆ ಇರುವಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.
‘ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡುವ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು . ಅಲ್ಲಿನ ಮೂಲ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು’ ಎಂದರು. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಲ್ಲಿ ವಿಫಲರಾಗಿರುವ ಬಗ್ಗೆ ಮಾತನಾಡಿದ ಅವರು ‘ರೈತರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಬ್ಬಾಳಿಕೆ ನಡೆಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ರೈತ ಸಂಘದ ಮುಖಂಡರಾದ ಹೊನ್ನೂರು ಪ್ರಕಾಶ್,ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಷಣ್ಮುಖ ಸ್ವಾಮಿ, ಚಾಮರಾಜನಗರ ತಾಲ್ಲೂಕು ಅಧ್ಯಕ್ಷ ಬಸವಣ್ಣ, ಜಿಲ್ಲಾ ಉಪಾಧ್ಯಕ್ಷ ಮಹೇಶ್ (ಹಸುಗುಳಿ) ಹನೂರು ಮಾದಪ್ಪ, ಚಂಗಡಿ ಕರಿಯಪ್ಪ, ಶಾಂತ್ ಕುಮಾರ್, ವಿನಿಸ್, ಅಮೋಘ್ ಇದ್ದರು.
ಮಲೆಮಹದೇಶ್ವರ ವನ್ಯಧಾಮದ ಒಳಗಿರುವ ಚಂಗಡಿ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಿದರೆ ಮಾನವ ಮತ್ತು ವನ್ಯಜೀವಿ ಸಂಘರ್ಷ ತಪ್ಪುತ್ತದೆ. ಈ ಸಂಬಂಧ ಚಂಗಡಿ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಿ ಜಾಗ ನಿಗದಿ ಮಾಡಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ರೈತರ ಸಭೆಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.