ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಪರಿಸರ ಸೂಕ್ಷ್ಮವಲಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಈಚೆಗೆ ಮಲಯಾಳಂ ಸಾಕ್ಷ್ಯಚಿತ್ರದ ಚಿತ್ರೀಕರಣಕ್ಕೆ ಅನುಮತಿ ನೀಡಿರುವ ವಿಚಾರದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆ ನಡುವೆ ತಿಕ್ಕಾಟ ಶುರುವಾಗಿದೆ.
‘ಹಿಮವದ್ ಗೋಪಾಲಸ್ವಾಮಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ಚಿತ್ರತಂಡ ತಾಲ್ಲೂಕು ಆಡಳಿತದಿಂದ ಪೂರ್ವಾನುಮತಿ ಪಡೆದಿಲ್ಲ’ ಎಂದು ತಹಸೀಲ್ದಾರ್ ರಮೇಶ್ ಬಾಬು ಸ್ಪಷ್ಟಪಡಿಸಿದ್ದಾರೆ.
‘ಇಲಾಖೆಯ ನಿಯಮಗಳ ಪ್ರಕಾರ ಚಿತ್ರೀಕರಣಕ್ಕೆ ಅನುಮತಿ ಕೋರಿ ಮನವಿ ಸಲ್ಲಿಸಬೇಕು. ಆದರೆ, ಚಿತ್ರತಂಡ ಸಂಪರ್ಕ ಮಾಡಿಲ್ಲ. ಚಿತ್ರೀಕರಣ ನಡೆದಿರುವ ವಿಚಾರವೂ ಗಮನಕ್ಕೆ ಬರಲಿಲ್ಲ’ ಎಂದು ತಿಳಿಸಿದ್ದಾರೆ.
ಪರಿಸರವಾದಿಗಳ ವಿರೋಧ: ದೇವಸ್ಥಾನದ ಬಳಿ ತೆರಳಲು ಸಾರ್ವಜನಿಕರ ವಾಹನಗಳಿಗೆ ಅನುಮತಿ ಇಲ್ಲದಿರುವಾಗ ಚಿತ್ರತಂಡದ ವಾಹನಗಳು ತೆರಳಲು ಅನುಮತಿ ನೀಡಿರುವುದಕ್ಕೆ ಪರಿಸರವಾದಿಗಳು, ಸ್ಥಳೀಯರು, ರೈತ ಸಂಘಗಳು ಹಾಗೂ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆಯಾದ್ಯಂತ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ.
‘ಒತ್ತಡಕ್ಕೆ ಮಣಿದು, ಹಣದಾಸೆಗೆ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರೀಕರಣಕ್ಕೆ, ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರುವುದು ಖಂಡನೀಯ. ಅನುಮತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹವೂ ಹೆಚ್ಚುತ್ತಿದೆ.
ಕೇರಳದ ಚಿತ್ರತಂಡವು ಏ.8ರಂದು ಚಿತ್ರೀಕರಣಕ್ಕೆ ಅವಕಾಶ ಕೋರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ (ವನ್ಯಜೀವಿ) ಮನವಿ ಸಲ್ಲಿಸಿದ್ದು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಪ್ರಕಾಶ್ ಅವರು ಚಿತ್ರೀಕರಣಕ್ಕೆ ಅನುಮತಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ (ಅರಣ್ಯ ಪಡೆ ಮುಖ್ಯಸ್ಥರು) ಪತ್ರ ಬರೆದಿದ್ದಾರೆ.
ಷರತ್ತಿಗೊಳಪಟ್ಟು, ನಿಗದಿತ ಠೇವಣಿ ಶುಲ್ಕವನ್ನು ಮುಂಗಡವಾಗಿ ಪಡೆದು, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ದೃಷ್ಟಿಯಿಂದ ಷರತ್ತುಗಳನ್ನು ವಿಧಿಸಿ ಅನುಮತಿ ನೀಡುವಂತೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಕ್ರಮಕ್ಕೆ ರೈತ ಸಂಘಟನೆ ಮನವಿ
ಹಿಮವದ್ ಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಗುಂಡ್ಲುಪೇಟೆ ತಾಲ್ಲೂಕಿನ ರೈತ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ದೂರು ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.