
ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ನಿರ್ವಹಣೆಗೊಳಪಟ್ಟಿರುವ ವಸತಿ ಶಾಲೆ, ಹಾಸ್ಟೆಲ್, ಆಶ್ರಮ ಶಾಲೆಗಳಲ್ಲಿ ಓದುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗಳಲ್ಲಿ ಉತ್ತಮ ಅಂಕಹಾಗೂ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಪೂರಕವಾಗಿ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ವಸತಿ ಶಾಲೆ, ವಿದ್ಯಾರ್ಥಿನಿಲಯ, ಅಶ್ರಮ ಶಾಲೆಗಳ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಫಲಿತಾಂಶ ಹಾಗೂ ಹಾಸ್ಟೆಲ್‌ಗಳ ಮೂಲಸೌಕರ್ಯ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚೆಗೆ ನಡೆದ ಪೂರ್ವಭಾವಿ ಪರೀಕ್ಷೆಗಳಲ್ಲಿ ಹಾಸ್ಟೆಲ್, ವಸತಿ ಶಾಲೆಗಳು ಪಡೆದಿರುವ ಫಲಿತಾಂಶದ ಆಧಾರದ ಮೇಲೆ ಮುಖ್ಯ ಪರೀಕ್ಷೆಯಲ್ಲಿ ಫಲಿತಾಂಶ ಮತ್ತಷ್ಟು ಸುಧಾರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ ಉತ್ತಮ ಅಂಕಗಳಿಗೆ ಒತ್ತು ನೀಡಬೇಕು. ಹಾಸ್ಟೆಲ್‌ಗಳ ವಾರ್ಡನ್‌ಗಳು ಹಾಗೂ ವಸತಿಶಾಲೆಯ ಪ್ರಾಂಶುಪಾಲರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಶಿಕ್ಷಣಕ್ಕೆ ಪೂರಕವಾದ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗಿದೆ. ಓದಿಗೆ ಪೂರಕ ಅನುಕೂಲಗಳು ಇವೆ. ಶೇ 100 ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಲು ಸೂಕ್ತ ಮಾರ್ಗದರ್ಶನ ಮಾಡಬೇಕು. ವಿದ್ಯಾರ್ಥಿಗಳು ಓದುತ್ತಿರುವ ಶಾಲೆ, ಕಾಲೇಜಿಗಳಿಗೆ ವಾರ್ಡನ್‌ಗಳು ಭೇಟಿನೀಡಿ ಫಲಿತಾಂಶ ಸುಧಾರಣೆಗೆ ಗಮನಹರಿಸಬೇಕು ಎಂದು ತಿಳಿಸಿದರು.
ಹಾಸ್ಟೆಲ್, ವಸತಿ ಶಾಲೆಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ತಾಜ ಸೊಪ್ಪು, ತರಕಾರಿ, ದಿನಸಿ ಪದಾರ್ಥಗಳನ್ನು ಬಳಸಬೇಕು. ಸಾಮಗ್ರಿಗಳ ದಾಸ್ತಾನು ವಹಿಯನ್ನು ಲೋಪಗಳಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ವ್ಯತ್ಯಾಸಗಳಾದರೆ ಸಂಬಂಧಪಟ್ಟ ವಾರ್ಡನ್‌ಗಳ ವಿರುದ್ದ ಗಂಭೀರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್.ಬಿಂದ್ಯಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಕಲ್ಯಾಣಾಧಿಕಾರಿ ಗುಡ್ಡಪ್ಪ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.
‘ನಿರ್ವಹಣೆ ಸಮರ್ಪಕವಾಗಿರಲಿ’
ಜಿಲ್ಲೆಯ ಎಲ್ಲ ಹಾಸ್ಟೆಲ್ ಹಾಗೂ ವಸತಿಶಾಲೆಗಳಲ್ಲಿ ಮೂಲಸೌಕರ್ಯಗಳ ನಿರ್ವಹಣೆ ಸಮರ್ಪಕವಾಗಿರಬೇಕು. ತಾಲ್ಲೂಕು ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಭೇಟಿನೀಡಿದ ಕುರಿತು ವರದಿ ಸಲ್ಲಿಸಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸಿ ಉಸ್ತುವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ತಾಕೀತು ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.