ADVERTISEMENT

ಚಾಮರಾಜನಗರ | ಸಮಗ್ರ ಅಭಿವೃದ್ಧಿಗೆ ನಿಖರ ದತ್ತಾಂಶ ಸಲ್ಲಿಸಿ: ಸಿಇಒ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 2:02 IST
Last Updated 20 ಜನವರಿ 2026, 2:02 IST
ಚಾಮರಾಜನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಕೆ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು
ಚಾಮರಾಜನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಕೆ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು   

ಚಾಮರಾಜನಗರ: ಜಿಲ್ಲಾ ಮಾನವ ಅಭಿವೃದ್ಧಿ ಹಾಗೂ ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ವರದಿ ತಯಾರಿಸಲು ಅಧಿಕಾರಿಗಳು ನಿಖರ ದತ್ತಾಂಶ ಒಳಗೊಂಡಿರುವ ಮಾಹಿತಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಕೆಗೆ ಜನರ ಜೀವನ ಮಟ್ಟ, ಶಿಕ್ಷಣ, ಆರೋಗ್ಯ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ಕೌಶಲಾಭಿವೃದ್ಧಿ, ಕೈಗಾರಿಕೆ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ, ಪೌಷ್ಟಿಕ ಆಹಾರ ಲಭ್ಯತೆ, ಆದಾಯ ಸೇರಿದಂತೆ ಇತರೆ ಅಂಕಿ ಅಂಶಗಳನ್ನು ಪರಿಗಣಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಖರವಾದ ಮಾಹಿತಿ ಕಲೆಹಾಕಿ ವರದಿ ಸಲ್ಲಿಸಬೇಕು. ನಿರ್ಲಕ್ಷ್ಯ ತೋರದೆ ಕಾಲಮಿತಿಯಲ್ಲಿ ಮಾಹಿತಿ ನೀಡಬೇಕು. ನಿಖರವಾದ ಮಾಹಿತಿಯಿಂದ ಜಿಲ್ಲೆಯ ಸಾಮಾಜಿಕ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಿಸಲು ಸಹಕಾರಿಯಾಗಲಿದೆ ಎಂದರು.

ಅಭಿವೃದ್ಧಿ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅನುಕೂಲವಾಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ. ಮುಂದಿನ 5 ವರ್ಷಗಳ ಅವಧಿಯಲ್ಲಿ ಮಾನವ ಅಭಿವೃದ್ಧಿ ವರದಿ ತಯಾರಿಕೆ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಮೈಸೂರಿನ ಎಸ್.ಐ.ಆರ್.ಡಿ ಸಮಾಲೋಚಕ ಜಿ.ಎಸ್.ಗಣೇಶ್‍ ಪ್ರಸಾದ್ ಮಾತನಾಡಿ ‘ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 184 ರಾಷ್ಟ್ರಗಳ ಪೈಕಿ ಭಾರತ 130ನೇ ಸ್ಥಾನದಲ್ಲಿದೆ. ದೇಶದಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿದೆ. ಜಿಲ್ಲಾವಾರು ಮಾಹಿತಿಯ ಅನ್ವಯ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿದೆ ಎಂದರು.

ಶಿಕ್ಷಣ ಹಾಗೂ ಆದಾಯ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಣಬೇಕಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವರದಿ ತಯಾರಿಸಬೇಕಿದ್ದು, ಆರೋಗ್ಯ, ಶಿಕ್ಷಣ, ಜನರ ಜೀವನಮಟ್ಟ ಸುಧಾರಣೆ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ರಾಜ್ಯ ಅಧಿಕಾರ ವಿಕೇಂದ್ರಿಕರಣ ಯೋಜನೆಯ ಆಶಯದಂತೆ ಕೆಳಹಂತದಲ್ಲಿರುವ ಜನರ ಬೇಡಿಕೆ, ಅಭಿಪ್ರಾಯ ಸಂಗ್ರಹಿಸಿ ಅಭಿವೃದ್ಧಿ ವರದಿ ರೂಪಿಸಬೇಕಾಗಿದೆ ಎಂದರು.

2011ರ ಜನಗಣತಿ ಆಧಾರದಲ್ಲಿ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ 2015ರಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಸಲಾಗಿತ್ತು. 2015ರಿಂದ 2025ರವರೆಗಿನ ಅಭಿವೃದ್ಧಿ ಸೂಚ್ಯಂಕವನ್ನು ಈಗ ತಯಾರಿಸಬೇಕಾಗಿದೆ. ಸ್ವಾತಂತ್ರ್ಯ ನಂತರ ಮಾನವ ಅಭಿವೃದ್ಧಿ ಸೂಚ್ಯಂಕ ತಯಾರಿಸಲು ಉತ್ಪನ್ನಗಳ ಹಾಗೂ ಆದಾಯಗಳ ಮೂಲವನ್ನು ಪರಿಗಣಿಸಲಾಗುತ್ತಿತ್ತು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಮೈಸೂರು ವಿವಿಯ ಅರ್ಥಶಾಸ್ತ್ರ ಹಾಗೂ ಸಹಕಾರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ನವೀತ ತಿಮ್ಮಯ್ಯ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಕಾಲಮಿತಿಯೊಳಗೆ ಸಮಗ್ರ ಮಾಹಿತಿ ಕಲೆ ಹಾಕಿ ವರದಿ ಸಲ್ಲಿಸಿ ಜೀವನಮಟ್ಟ ಸುಧಾರಣೆಗೆ ಆರೋಗ್ಯ, ಶಿಕ್ಷಣ ಸಹಕಾರಿ ಮಾನವ ಅಭಿವೃದ್ಧಿ ಸೂಚ್ಯಂಕ: ಕರ್ನಾಟಕಕ್ಕೆ 11ನೇ ಸ್ಥಾನ

ಶಿಕ್ಷಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಮುಖ್ಯ’: ಯಾವುದೇ ದೇಶದ ಅಭಿವೃದ್ಧಿ ಸೂಚ್ಯಂಕವು ಅಲ್ಲಿನ ಶಿಕ್ಷಣ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಯ ಮೇಲೆ ಅವಲಂಬಿತವಾಗಿರುತ್ತದೆ. ಭಾರತ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದರೂ ಸಮಸ್ಯೆಗಳು ಬಹಳಷ್ಟಿವೆ. ಕೆಲವು ಕ್ಷೇತ್ರಗಳಲ್ಲಿ ಅಭಿವೃದ್ಧಿ ಇನ್ನೂ ಆಗಬೇಕಿದೆ. ವರದಿ ತಯಾರಿಕೆಯಲ್ಲಿ ಯಾವುದೇ ಒಂದು ವರ್ಗದ ಅಭಿವೃದ್ಧಿಯನ್ನು ಮಾನದಂಡವಾಗಿ ಪರಿಗಣಿಸಬಾರದು. ಸಮುದಾಯದ ಸಹಭಾಗಿತ್ವದೊಂದಿಗೆ ವರದಿ ತಯಾರಿಸಲು ಅಧಿಕಾರಿಗಳು ಮುಂದಾಗಬೇಕು. ಪ್ರಸ್ತುತ ಮಾನವ ಅಭಿವೃದ್ಧಿ ವರದಿ ತಯಾರಿಕೆ ಅಧಿಕಾರಿಗಳಿಗೆ ಸವಾಲಿನ ಕೆಲಸ ಎಂದು ಜಿ.ಎಸ್.ಗಣೇಶ್‍ಪ್ರಸಾದ್  ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.