ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದ ಕಾವೇರಿ ನದಿ ತೀರದಲ್ಲಿ ಮರಳು ಅಕ್ರಮ ಸಾಗಣೆಗೆ ಬಳಸಿದ್ದ ಎತ್ತಿನಗಾಡಿಯನ್ನು ಗ್ರಾಮಾಂತರ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಮುಳ್ಳೂರು ಗ್ರಾಮದ ನಾಗರಾಜು ಪರಾರಿಯಾದ ಆರೋಪಿ. ಈತ ಕಾವೇರಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಣೆ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಎಸ್ಐ ಸುಪ್ರೀತ್ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಲು ಮುಂದಾದರು. ಈ ವೇಳೆ ನಾಗರಾಜು ಪೊಲೀಸ್ ಜೀಪ್ ನೋಡಿದ ಕೂಡಲೇ ಎತ್ತಿನಗಾಡಿ ಬಿಟ್ಟು ಪರಾರಿಯಾಗಿದ್ದಾನೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಾನ್ಸ್ಟೆಬಲ್ ಪೂಜೇರಿ, ಸಂತೋಷ್ ಪವಾರ್, ಶ್ರವಣಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.