ADVERTISEMENT

ಸ್ವಾತಂತ್ರ್ಯೋತ್ಸವ: ಅಚ್ಚುಕಟ್ಟು, ಅರ್ಥಪೂರ್ಣವಾಗಿರಲಿ

ಸರ್ವರ ಸಹಕಾರದೊಂದಿಗೆ ಆಯೋಜನೆ: ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 3:00 IST
Last Updated 6 ಆಗಸ್ಟ್ 2025, 3:00 IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು   

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಸರ್ವರ ಸಹಕಾರದೊಂದಿಗೆ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು ಅರ್ಥಪೂರ್ಣವಾಗಿ ಕಾರ್ಯಕ್ರಮ ಜರುಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಗೊಂದಲಗಳಿಲ್ಲದಂತೆ, ಲೋಪಗಳಾಗದಂತೆ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ವರ ಸಲಹೆ ಸಹಕಾರ ಅಗತ್ಯ ಎಂದರು.

ಸರ್ಕಾರಿ ಶಾಲಾ ಮಕ್ಕಳಿಂದ ಪಥ ಸಂಚಲನ, ಸ್ವಾತಂತ್ರ್ಯ ಹೋರಾಟಗಳ ಮಹತ್ವವನ್ನು ಬಿಂಬಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಪಥ ಸಂಚಲನದ ತಾಲೀಮು, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಶುದ್ದ ಕುಡಿಯುವ ನೀರು, ವೈದ್ಯಕೀಯ ನೆರವು ಸೇರಿದಂತೆ ತುರ್ತು ವ್ಯವಸ್ಥೆ ಮಾಡಬೇಕು. ವೈದ್ಯರು ಹಾಗೂ ಶುಶ್ರೂಷಕರನ್ನೊಳಗೊಂಡ ತಂಡ ಹಾಗೂ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಬೇಕು ಎಂದರು.

ADVERTISEMENT

ಬ್ಯಾಂಕ್‌, ಎಲ್ಲ ಗ್ರಾಮ ಪಂಚಾಯಿತಿಗಳು, ಶಾಲಾ ಕಾಲೇಜುಗಳು, ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನ ಆಚರಿಸಬೇಕು. ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ಸಲ್ಲಿಸಬೇಕು. ಧ್ವಜ ಸಂಹಿತೆ ಪ್ರಕಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು.

ಪ್ಲಾಸ್ಟಿಕ್ ಧ್ವಜಗಳ ಬದಲಾಗಿ ಬಟ್ಟೆಯ ಧ್ವಜಗಳ ಬಳಕೆ ಮಾಡಬೇಕು. ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸ್ವಾತಂತ್ರೋತ್ಸವದಂದು ಗೌರವಿಸಬೇಕು ಎಂದು ಹಲವರು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ವಿವಿಧ ಸಂಘಟನೆಗಳ ಮುಖಂಡರಾದ ವೆಂಕಟರಮಣ ಸ್ವಾಮಿ, ಚಾ.ರಂ.ಶ್ರೀನಿವಾಸಗೌಡ, ಮಹದೇವಶೆಟ್ಟಿ, ನಿಜಧ್ವನಿ ಗೋವಿಂದರಾಜು, ಚಾ.ಹ.ಶಿವರಾಜು, ಚಾ.ಗು. ನಾಗರಾಜು, ಪಣ್ಯದಹುಂಡಿ ರಾಜು, ಜಿ.ಬಂಗಾರು, ಸಿ.ಎಂ.ನರಸಿಂಹ ಮೂರ್ತಿ, ಬ್ಯಾಡಮೂಡ್ಲು ಬಸವಣ್ಣ, ಶಿವು, ಆಲೂರುಮಲ್ಲು, ಸಿ.ಎಂ.ಶಿವಣ್ಣ, ಎಲ್.ಸುರೇಶ್, ಪರ್ವತ್‍ರಾಜ್, ಆಲೂರು ರವಿಕುಮಾರ್, ಮಹೇಶ್‍ಗೌಡ ಇದ್ದರು.

ಸಮಿತಿಗಳ ರಚನೆ

‘ಶಿಷ್ಟಾಚಾರದಂತೆ ಸಮಾರಂಭ ನಡೆಯಬೇಕು ಸ್ವಾಗತ ಸಮಿತಿ ವೇದಿಕೆ ಸಮಿತಿ ಪೆರೇಡ್ ಸಮಿತಿ ಆಹ್ವಾನ ಪತ್ರಿಕೆ ಮುದ್ರಣ ಸಮಿತಿ ಧ್ವಜ ಸಿದ್ದತಾ ಸಮಿತಿ ಸಾಂ‌ಸ್ಕೃತಿಕ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದ್ದು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸ್ವಾತಂತ್ರ್ಯ ದಿನ ಎಲ್ಲ ಅಧಿಕಾರಿಗಳು ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು ರಾಷ್ಟ್ರೀಯ ಹಬ್ಬ ಆಚರಣೆಗೆ ಸರ್ವರ ಸಹಕಾರ ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.