
ಚಾಮರಾಜನಗರ: 'ಹನೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಅಗತ್ಯ ಬಸ್‌ಗಳ ಸೌಲಭ್ಯ ನೀಡದ ರಾಜ್ಯ ಸರ್ಕಾರ ವಿದ್ಯಾರ್ಥಿಗಳನ್ನು ಬೀದಿಯಲ್ಲಿ ನಿಲ್ಲಿಸಿದೆ. ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿನಿತ್ಯ ಐದಾರು ಕಿ.ಮೀ. ನಡೆದು ಹೋಗಿ ಬಸ್ ಹತ್ತಬೇಕಿದೆ. ರಸ್ತೆ , ಮೂಲಸೌಕರ್ಯಗಳು ಇಲ್ಲದೆ ಕಾಡಂಚಿನ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.
‘ರಾಜ್ಯ ಸರ್ಕಾರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದರೂ ಜಿಲ್ಲೆಗೆ ಪ್ರಯೋಜನವಾಗಿಲ್ಲ. ಕಾಟಾಚಾರದ ಸಚಿವ ಸಂಪುಟ ಸಭೆ ನಡೆಸಲಾಗಿದ್ದು ,ಇಂದಿಗೂ ಸೌಲಭ್ಯಗಳು ದೊರೆತಿಲ್ಲ. ಹಾಡಿಗಳಿಗೆ ರಸ್ತೆ, ಚರಂಡಿ, ಬೀದಿದೀಪ ಸೇರಿದಂತೆ ಸೌಕರ್ಯಗಳು ದೊರೆತಿಲ್ಲ’ ಎಂದು ಆರೋಪಿಸಿದರು.
‘ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಮಹಾಸಭಾದಿಂದ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಸ್ಪಂದನೆ ಸಿಕ್ಕಿಲ್ಲ. ಸರ್ಕಾರ ಕೂಡಲೇ ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳಿಗೆ ರಸ್ತೆ, ಬಸ್ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.
ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ಸಿ.ಎಂ.ಕೃಷ್ಣಮೂರ್ತಿ, ಮುತ್ತಿಗೆ ಗೋವಿಂದರಾಜು, ಮಹೇಶ್‌ಗೌಡ, ಹೊಮ್ಮ ಲೋಕೇಶ್, ರವಿಚಂದ್ರ ಪ್ರಸಾದ್ ಕಹಳೆ, ಶಿವು, ಮುತ್ತುರಾಜು, ವೀರಭದ್ರ, ರಾಚಪ್ಪ, ಲಿಂಗರಾಜು, ನಂಜುಂಡ, ನಾಗಪ್ಪ ಹೊಸಹಳ್ಳಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.