ADVERTISEMENT

ಚಾಮರಾಜನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಒತ್ತಾಯ

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕರ್ನಾಟಕ ಸೇನಾಪಡೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 12:52 IST
Last Updated 12 ನವೆಂಬರ್ 2020, 12:52 IST
ಕರ್ನಾಟಕ ಸೇನಾ ಪ‍ಡೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು
ಕರ್ನಾಟಕ ಸೇನಾ ಪ‍ಡೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು   

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಗಡಿಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಬೇಕು ಎಂದು ಕರ್ನಾಟಕ ಸೇನಾಪಡೆ ಒತ್ತಾಯಿಸಿದೆ.

ಸೇನಾ ಪಡೆಯ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಭೇಟಿಯಾಗಿ, ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

'ಮುಖ್ಯಮಂತ್ರಿ ಅವರು ಇದೇ ತಿಂಗಳು 26ರಂದುಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ಅನೇಕ ಅಭಿವೃದ್ದಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡುತ್ತಿರುವುದು ಸಂತಸದ ವಿಷಯ. ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರಕ್ಕೂ ಭೇಟಿ ನೀಡಿ ಇಲ್ಲಿನ ಅನೇಕ ಸಮಸ್ಯೆಗಳನ್ನು ಪರಿಶೀಲಿಸಬೇಕು’ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ADVERTISEMENT

‘ನಗರದಲ್ಲಿ ವಿಶೇಷ ಸಭೆ ನಡೆಸಿ, ಜಿಲ್ಲೆಯ ಇನ್ನೂ ಅನೇಕ ಕೆರೆಗಳಿಗೆ ನೀರು ತುಂಬಿಸಬೇಕು. ಚಾಮರಾಜನಗರಕ್ಕೆ 2ನೇ ಹಂತ ಕುಡಿಯುವ ನೀರಿನ ಯೋಜನೆ ಜಾರಿ ಮಾಡಬೇಕು. ಬಡವರಿಗೆ ನಿವೇಶನವನ್ನು ನೀಡುವ ಸಲುವಾಗಿ ಒಂದು ಉಪನಗರ ನಿರ್ಮಾಣ ಮಾಡಬೇಕು. ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ದೇವಸ್ಥಾನವನ್ನು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿಸಬೇಕು’ ಎಂದು ಪತ್ರದಲ್ಲಿ ಹೇಳಲಾಗಿದೆ.

‘ಜಿಲ್ಲಾ ಕ್ರೀಡಾಂಗಣ, ಕಲಾಮಂದಿರ ಸೇರಿದಂತೆ ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅವುಗಳ ಉದ್ಘಾಟನೆಯನ್ನು ಸ್ವತಃ ನೀವೇ ಮಾಡಬೇಕು. ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡಬೇಕು’ ಎಂದು ಸೇನಾ ಪಡೆ ಮನವಿಯಲ್ಲಿ ಒತ್ತಾಯಿಸಿದೆ.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ನಿಜಧ್ವನಿಗೋವಿಂದರಾಜು, ತಾಂಡವಮೂರ್ತಿ, ವೀರಭದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.