ADVERTISEMENT

ಕೊಳ್ಳೇಗಾಲ ಮಾಜಿ ಶಾಸಕ ಬಾಲರಾಜು ಬಿಜೆಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 8:07 IST
Last Updated 23 ಏಪ್ರಿಲ್ 2023, 8:07 IST
ಕೊಳ್ಳೇಗಾಲ ಮಾಜಿ ಶಾಸಕ ಬಾಲರಾಜು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು
ಕೊಳ್ಳೇಗಾಲ ಮಾಜಿ ಶಾಸಕ ಬಾಲರಾಜು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು   

ಕೊಳ್ಳೇಗಾಲ: ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ, ಮಾಜಿ ಶಾಸಕ ಎಸ್. ಬಾಲರಾಜು ಶುಕ್ರವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. 

ಯಡಿಯೂರಪ್ಪ ಅವರು ಶಾಲು ಹಾಕಿ, ಬಿಜೆಪಿ ಬಾವುಟ ನೀಡಿ ಬಾಲರಾಜು ಅವರನ್ನು ಬರಮಾಡಿಕೊಂಡರು. ಅವರೊಂದಿಗೆ 100ಕ್ಕೂ ಹೆಚ್ಚು ಬೆಂಬಲಿಗರು ಇದೇ ಸಂದರ್ಭದಲ್ಲಿ ಬಿಜೆಪಿ ಸೇರಿದರು. 

ಬಿಜೆಪಿ ಸೇರ್ಪಡೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಾಲರಾಜು, ‘23 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಆದರೆ ಪಕ್ಷ ನನಗೆ ಮೋಸ ಮಾಡಿತು. ನಾನು ನನ್ನ ಮಾತೃ ಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಬಿ.ಎಸ್ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ನಡೆದು ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ’ ಎಂದರು. 

ADVERTISEMENT

ಮಹೇಶ್‌ ಗೆಲುವು ಖಚಿತ: ‘ಶಾಸಕ ಮಹೇಶ್ ಜೊತೆಗೂಡಿ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಮತಯಾಚನೆ ಮಾಡುತ್ತೇನೆ. ಕೊಳ್ಳೇಗಾಲದಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಸೋಲುವುದು ನಿಶ್ಚಿತ’ ಎಂದರು. 

‘ನಾನು ಬಿಜೆಪಿಗೆ ಸೇರ್ಪಡೆಯಾಗುವುದಕ್ಕೂ ಮೊದಲು ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ಸಭೆ ನಡೆಸಿದ್ದೇನೆ. ಆ ಬಳಿಕವಷ್ಟೇ ಪಕ್ಷ ತೊರೆಯುವ ತೀರ್ಮಾನ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಅವಕಾಶ ನೀಡುವ ಭರವಸೆಯನ್ನು ಬಿಜೆಪಿ ಮುಖಂಡರು ನೀಡಿದ್ದಾರೆ’ ಎಂದು ಬಾಲರಾಜು ಹೇಳಿದರು. 

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಖಂಡ ಲಕ್ಷ್ಮೀನಾರಾಯಣ ಸೇರಿದಂತೆ ಹಲವರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.