ಕೊಳ್ಳೇಗಾಲ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ನಗರದ ‘ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು’ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ. ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ಸ್ವಾತಂತ್ರ ಸಿಕ್ಕಿದೆ. ಒಬ್ಬ ಮಹಿಳೆ ನಿರ್ಭೀತಿಯಿಂದ ಮಧ್ಯರಾತ್ರಿ ಓಡಾಡುವ ಕಾಲ ಬರಬೇಕು ಎಂದು ಮಹಾತ್ಮ ಗಾಂಧಿ ಕನಸು ಕಂಡಿದ್ದರು ಆ ಕನಸು ಈಗ ನನಸಾಗಿದೆ. ಶಾಂತಿಯುತ ಸಮಾಜ ಇದ್ದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ವಿದ್ಯಾರ್ಥಿಗಳು ಪಠ್ಯ ಜೊತೆಗೆ ಮಹನೀಯರ ಸಾಧನೆಯ ವಿಷಯಗಳನ್ನು ತಿಳಿದುಕೊಳ್ಳಬೇಕು. ಪ್ರತಿಯೊಬ್ಬರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು’ ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಪಂಚ ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನು ಅಭಿವೃದ್ಧಿ ಮಾಡಿದ್ದರು. ಈಗ ಗ್ಯಾರಂಟಿಯನ್ನು ಜಾರಿಗೆ ತಂದಿದ್ದಾರೆ . ನಮ್ಮ ಸರ್ಕಾರ ಇಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಮಾಜದ ಏಳಿಗೆಗೆ ಶ್ರಮಿಸುತ್ತಿದೆ’ ಎಂದರು.
ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಧ್ವಜಾರೋಹಣ ಮಾಡಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೊಲೀಸರು ಹಾಗೂ ಶಾಲಾ ಮಕ್ಕಳು ಆಕರ್ಷಕ ಪಥಸಂಚಲನ ಮಾಡಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜೇಂದ್ರ, ನಗರಸಭೆ ಅಧ್ಯಕ್ಷೆ ರೇಖಾ, ಉಪಾಧ್ಯಕ್ಷ ಎ.ಪಿ.ಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ತಹಶೀಲ್ದಾರ್ ಬಸವರಾಜು, ಡಿವೈಎಸ್ಪಿ ಧರ್ಮೇಂದ್ರ, ತಾಲ್ಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
‘ದೇಶಕ್ಕಾಗಿ ಪ್ರಾಣ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ’ ‘ಮಹನೀಯರ ಆದರ್ಶ, ತತ್ವಗಳನ್ನು ವಿದ್ಯಾರ್ಥಿಗಳು ಪಾಲಿಸಿ’ ‘ಅಭಿವೃದ್ಧಿಗೆ ಮಹತ್ವ ನೀಡುತ್ತಿರುವ ಮೋದಿ, ಸಿದ್ದರಾಮಯ್ಯ’
ಗೌರವ ಅನಾಥ ಶವಗಳನ್ನು ಸ್ವಂತ ಅಂಬ್ಯುಲೆನ್ಸ್ ಸಾಗಿಸಿ ಶವಸಂಸ್ಕಾರ ಮಾಡುತ್ತಿರುವ ರಾಜೇಶ್ ಅವರನ್ನು ಗೌರವಿಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳನ್ನು ಯಾಲ್ಲೂಕು ಆಡಳಿತದಿಂದ ಸನ್ಮಾನಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.