ADVERTISEMENT

ವಿದ್ಯಾರ್ಥಿಗಳಿಗೆ ಸ್ಫೂರ್ತಿ, ಉತ್ತೇಜನ ನೀಡಿ: ಸಿಇಒ

ಫಲಿತಾಂಶದ ಗುಣಮಟ್ಟ ಹೆಚ್ಚಳ ಉದ್ದೇಶದ ‘ಲ್ಯಾಂಪ್‌’ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 14:15 IST
Last Updated 7 ಡಿಸೆಂಬರ್ 2018, 14:15 IST
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಉದ್ಘಾಟಿಸಿದರು
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಉದ್ಘಾಟಿಸಿದರು   

ಚಾಮರಾಜನಗರ: ಶಿಕ್ಷಕರು ತಮ್ಮ ಜ್ಞಾನ ಹಾಗೂ ಸಾಮರ್ಥ್ಯವನ್ನು ವಿದ್ಯಾರ್ಥಿಗಳಿಗೆ ವರ್ಗಾವಣೆ ಮಾಡುವ ಮೂಲಕ ಅವರಲ್ಲಿ ಸ್ಫೂರ್ತಿ ಮತ್ತುಉತ್ತೇಜನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್‌ಕುಮಾರ್ ಅವರು ಶುಕ್ರವಾರ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್ಎಸ್ಎಲ್‌ಸಿ ಫಲಿತಾಂಶದ ಗುಣಮಟ್ಟ ಹೆಚ್ಚಳ ಹಾಗೂ ಕಲಿಕಾ ಸಾಧನೆಗಾಗಿ ಹಮ್ಮಿಕೊಂಡಿರುವ ಲ್ಯಾಂಪ್ (ಲರ್ನಿಂಗ್ ಅಚೀವ್‌ಮೆಂಟ್ ಮೋಟಿವೇಷನ್ ಪ್ರೋಗ್ರಾಂ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೋಧನೆಯನ್ನು ಚೇತೋಹಾರಿಯಾಗಿ ಮಾಡುವ ಮೂಲಕ ಮಕ್ಕಳಲ್ಲಿ ಆಸಕ್ತಿ ಹುಟ್ಟಿಸುವ ಕಲೆ ಶಿಕ್ಷಕರಲ್ಲಿದೆ. ಶಿಕ್ಷಣ ಕ್ಷೇತ್ರದಲ್ಲಿವಿದ್ಯಾರ್ಥಿಗಳನ್ನು ಆಕರ್ಷಿಸುವ ಗುಣವುಳ್ಳ ಶಿಕ್ಷಕರಿಂದ ವಿಭಿನ್ನ ಸಂಶೋಧನೆ ಚಟುವಟಿಕೆಗಳು ಸಾಧ್ಯವಾಗಲಿವೆ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು. ಶಿಕ್ಷಕರಿಂದ ಶಿಸ್ತು, ಜ್ಞಾನ, ಬದ್ಧತೆ, ತೊಡಗಿಕೊಳ್ಳುವಿಕೆಯನ್ನು ನಿರೀಕ್ಷೆ ಮಾಡಲಾಗುತ್ತದೆ ಎಂದರು.

ADVERTISEMENT

ಪ್ರತಿಫಲ ನಿರೀಕ್ಷೆ ಇಲ್ಲದೆ ಕರ್ತವ್ಯ ನಿರ್ವಹಿಸುವ ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಹುರಿದುಂಬಿಸಬೇಕಿದೆ. ಗುಣಮಟ್ಟದ ಶಿಕ್ಷಣ ಬಹುಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಸಕಾರಾತ್ಮಕವಾಗಿ ಚಿಂತಿಸಬೇಕು. ಇನ್ನೂ 3 ತಿಂಗಳಲ್ಲಿ ವಿಶೇಷ ಗಮನ ನೀಡಿದರೆ ಯಶಸ್ಸು ಲಭಿಸಲಿದೆ ಎಂದು ತಿಳಿಸಿದರು.

‘ಲ್ಯಾಂಪ್‌’ ಹಾಗೂ ಇಲಾಖೆ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳಾ‌ ಪ್ರಸ್ತಾಪಿಸಿದರು.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮರುಗದಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್ ಪಾಂಡೆ ಮಾತನಾಡಿದರು.

ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಸಿ.ಎನ್.ರಾಜು, ಡಯಟ್ ಪ್ರಭಾರ ಪ್ರಾಂಶುಪಾಲ ನಾಗರಾಜು, ಅಕ್ಷರ ದಾಸೋಹ ಅಧಿಕಾರಿ ಉದಯ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿಪತಿ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.