ADVERTISEMENT

ಚಾಮಲ್‌ ಸೂಪರ್‌ ಸೀಡ್‌ಗೆ ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 12:25 IST
Last Updated 24 ನವೆಂಬರ್ 2020, 12:25 IST
ಚಾಮುಲ್‌ ಲಾಂಛನ
ಚಾಮುಲ್‌ ಲಾಂಛನ   

ಚಾಮರಾಜನಗರ: ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವನ್ನು (ಚಾಮುಲ್‌) ರಾಜ್ಯ ಸರ್ಕಾರ ಸೂಪರ್‌ ಸೀಡ್ ಮಾಡಿ, ನಡೆದಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ‌ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಗೌರವಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರು, ‘ಚಾಮುಲ್‌ನಲ್ಲಿ ರೋಸ್ಟರ್‌ ಪದ್ಧತಿಯನ್ನು ಉಲ್ಲಂಘಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಅಂಗವಿಕಲರು ಹಾಗೂ ಮಹಿಳೆಯರಿಗೆ ಮೀಸಲಾಗಿದ್ದ 18 ಹುದ್ದೆಗಳನ್ನು ಹಣ ಪ‍ಡೆದು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ನೇಮಕಾತಿಯಲ್ಲಿ ಪ‍ರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದರು.

‘ಚಾಮುಲ್ ನಷ್ಟದಲ್ಲಿ ನಡೆಯುತ್ತಿದೆ ಎಂದು ಅದರ ಅಧ್ಯಕ್ಷರು ಇತ್ತೀಚೆಗೆ ಹೇಳಿದ್ದಾರೆ. ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವೇತನಕೊಡಲು ಪ್ರತಿ ತಿಂಗಳು ₹2 ಕೋಟಿ ಬೇಕು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರಿಗೆ ಹಣ ಕೊಡಲು ಆಗದ ಸ್ಥಿತಿ ನಿರ್ಮಾಣವಾಗಲಿದೆ. ಅಕ್ರಮವಾಗಿ ನೇಮಕವಾಗಿರುವರವನ್ನು ತಕ್ಷಣ ವಜಾಗೊಳಿಸಬೇಕು. ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

ಸಮಿತಿಯ ಅಧ್ಯಕ್ಷ ವೀರಭದ್ರಸ್ವಾಮಿ, ಉಪಾಧ್ಯಕ್ಷ ಬಂಗಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.