
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಾಳುಬೆಟ್ಟದ ಸಮೀಪ ಬುಧವಾರ ಭಕ್ತರೊಬ್ಬರನ್ನು ಕೊಂದಿದ್ದ ಚಿರತೆಯನ್ನು ಗುರುವಾರ ರಾತ್ರಿ ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
2ರಿಂದ 3 ವರ್ಷ ಪ್ರಾಯದ ಗಂಡು ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ.
ಬುಧವಾರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಮೇಲೆ ಚಿರತೆ ದಾಳಿ ನಡೆಸಿತ್ತು. ಇದರಿಂದಾಗಿ, ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿ ಎರಡು ಬೋನುಗಳನ್ನು ಇರಿಸಿದ್ದರು. 50ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು. ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಲಾಯಿತು. ಚಿರತೆ ಕಾರ್ಯಾಚರಣೆ ಪಡೆ ಹಾಗೂ ತಜ್ಞ ವೈದ್ಯಾಧಿಕಾರಿಗಳು ಸಹ ಇದ್ದರು.
ರಂಗಸ್ವಾಮಿ ಒಡ್ಡು ಬಳಿ ಚಿರತೆಯ ಚಲನವಲನಗಳು ಡ್ರೋನ್ ಕ್ಯಾಮೆರಾದಲ್ಲಿ ಪತ್ತೆಯಾದ ನಂತರ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.