ADVERTISEMENT

ಹನೂರು: ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಮಹದೇಶ್ವರ ಬೆಟ್ಟ ಸಜ್ಜು

ಭಕ್ತರಿಗೆ ಕುಡಿಯುವ ನೀರು,ಜ್ಯೂಸ್ ವಿತರಣೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 6:50 IST
Last Updated 5 ಫೆಬ್ರುವರಿ 2026, 6:50 IST
ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ನಿಮಿತ್ತ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಶಾಮಿಯಾನ ಅಳವಡಿಸುತ್ತಿರುವುದು‌
ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ನಿಮಿತ್ತ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಶಾಮಿಯಾನ ಅಳವಡಿಸುತ್ತಿರುವುದು‌   
10 ದಿನಗಳ ಮುನ್ನವೇ ಜಾತ್ರೆಗೆ ಸಿದ್ಧತೆ ಆರಂಭ | ಡಾರ್ಮೆಟ್ರಿ ರಸ್ತೆಗೆ ಡಾಂಬರೀಕರಣ ದೇವರ ದರ್ಶನಕ್ಕೆ 250 ಕೌಂಟರ್

ಹನೂರು: ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಫೆ.14ರಿಂದ 18ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದರ ಅಂಗವಾಗಿ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಬುಧವಾರದಿಂದಲೇ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಐದು ದಿವಸ ನಡೆಯುವ ಜಾತ್ರಾ ಮಹೋತ್ಸವಕ್ಕೆ ಪಾದಯಾತ್ರೆ ಹಾಗೂ ವಾಹನಗಳ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ನೆರೆಯ ತಮಿಳುನಾಡಿನಿಂದಲೂ 10 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಜಾತ್ರೆಗೆ 10 ದಿನಗಳ ಮುನ್ನವೇ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

‘ಪಾದಯಾತ್ರೆಯ ಮೂಲಕ ಬರುವ ಭಕ್ತರಿಗೆ ದಾನಿಗಳು ನೀರು, ಹಣ್ಣು, ಜ್ಯೂಸ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ಶಿವರಾತ್ರಿ ಜಾತ್ರಾ ಮಹೋತ್ಸವದಿಂದ ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಪ್ಲಾಸ್ಟಿಕ್ ನೀರಿನ ಬಾಟಲ್ ವಿತರಣೆ ಮಾಡುವುದನ್ನು ನಿರ್ಬಂಧ ವಿಧಿಸಲಾಗಿದೆ. ಈಗಾಗಲೇ ತಾಳು ಬೆಟ್ಟದಲ್ಲಿ ತೆರೆದಿರುವ ಚೆಕ್‌ಪೋಸ್ಟ್‌ನಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ತರುವ ವಾಹನಗಳನ್ನು ತಡೆಯಲು ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ಭಕ್ತರೂ ಪ್ಲಾಸ್ಟಿಕ್ ಬಳಸದೇ ಪ್ಲಾಸ್ಟಿಕ್‌ಮುಕ್ತ ಮಾಡಲು ಸಹಕರಿಸಬೇಕು’ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ADVERTISEMENT

ಕನಕಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನಿಂದ ಭಕ್ತರು ಪಾದಯಾತ್ರೆಯ ಮೂಲಕ ಜಾತ್ರಾ ಮಹೋತ್ಸವಕ್ಕೆ ಆಗಮಿಸುವುದು ವಿಶೇಷ. ಈ ಹಿನ್ನೆಲೆ ಪ್ರಾಧಿಕಾರದ ಕಚೇರಿ ಸಮೀಪದ ಅರಳಿ ಮರದ ಮುಂಭಾಗದಿಂದ ಪ್ರತ್ಯೇಕ ಸರತಿ ಸಾಲು ನಿರ್ಮಿಸಿ ರಾಜಗೋಪುರ ಮುಖ್ಯದ್ವಾರ ಹಾಗೂ 250 ಟಿಕೆಟ್ ಕೌಂಟರ್ ಮೂಲಕ ಉಚಿತ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪಾದಯಾತ್ರೆಯ ಮೂಲಕ ಬರುವ ಭಕ್ತರು ವಿಶ್ರಾಂತಿ ತೆಗೆದುಕೊಳ್ಳಲು ರಾಜಗೋಪುರದ ಬಲ ಭಾಗದಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಸ್ವಚ್ಛತಾ ಕಾರ್ಯಗಳು ಪೂರ್ಣಗೊಂಡಿದ್ದು, ಶುದ್ಧ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆಯಲು ಬರುವ ಭಕ್ತರಿಗೆ ಪ್ರತಿ ಗೇಟ್‌ನಲ್ಲಿಯೂ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಪಾದಯಾತ್ರಿಗಳಿಗೆ ರಾಜಗೋಪುರದ ಬಲ ಭಾಗ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ಜೊತೆಗೆ ತುರ್ತು ಚಿಕಿತ್ಸಾ ಆರೋಗ್ಯ ಕೇಂದ್ರವನ್ನು ಪ್ರಾರಂಭಿಸಿ ಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗಿದೆ. ಇದಲ್ಲದೆ ವಿಶೇಷವಾಗಿ ವಿಶ್ರಾಂತಿ ಪಡೆಯುವ ಭಕ್ತರಿಗೆ ಪ್ರಾಧಿಕಾರದ ವತಿಯಿಂದ ಬಿಸಿಬೇಳೆ ಬಾತ್ ಹಾಗೂ ಮೊಸರನ್ನ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

‘ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ 15 ಕಡೆ ಕುಡಿಯುವ ನೀರಿನ ಟ್ಯಾಂಕ್ ಇಟ್ಟು ನೀರು ಪೂರೈಕೆ ಮಾಡಲಾಗುತ್ತಿದೆ. ಮೊಬೈಲ್ ಶೌಚಾಲಯ ನಿರ್ಮಾಣ ಮಾಡಲು ಅರಣ್ಯ ಇಲಾಖೆಯ ಅನುಮತಿಗಾಗಿ ಪತ್ರ ಬರೆಯಲಾಗಿದೆ. ಅನುಮತಿ ಸಿಕ್ಕ ಬಳಿಕ ಆನೆ ತಲೆದಿಂಬ, ರಂಗಸ್ವಾಮಿ ಒಡ್ಡು ಹಾಗೂ ತಾಳಬೆಟ್ಟ ತಿರುವಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಆರು ಮೊಬೈಲ್ ಶೌಚಾಲಯ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಜಾತ್ರಾ ಮಹೋತ್ಸವ ಪ್ರಯುಕ್ತ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತ ಭಕ್ತರು ಪರ ಮಾಡುವುದು ಸಂಪ್ರದಾಯ. ಅದರಂತೆ ಡಾರ್ಮೆಟ್ರಿ ರಸ್ತೆ ಹದಗೆಟ್ಟಿರುವುದರಿಂದ ಅಭಿವೃದ್ಧಿ ಪಡಿಸಲಾಗುತ್ತಿದೆ ಗುರುವಾರದಿಂದ ಡಾಂಬರೀಕರಣ ಕಾಮಗಾರಿ ಪ್ರಾರಂಭವಾಗಿದೆ.

ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ಬರುವ ಭಕ್ತರಿಗೆ ಅನುಕೂಲವಾಗಲು ದಾರಿಯುದ್ದಕ್ಕೂ ಬೆಳೆದಿರುವ ಗಿಡಗಂಟಿಗಳನ್ನು ತೆರೆವುಗೊಳಿಸುತ್ತಿರುವುದು
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಿನ್ನಲೆ ತೇರಿನ ನಿರ್ಮಾಣ ಕಾರ್ಯ ನಡೆಯುತ್ತಿರುವುದು

ಭಕ್ತಾದಿಗಳ ಸುರಕ್ಷತೆಗೆ ಗೃಹರಕ್ಷಕ ದಳದ ಸಿಬ್ಬಂದಿ

‘ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಕಳೆದ ತಿಂಗಳು ಚಿರತೆ ದಾಳಿ ಮಾಡಿದ ಪರಿಣಾಮ ಭಕ್ತರೊಬ್ಬರು ಮೃತಪಟ್ಟಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಾದಯಾತ್ರೆಯ ಮೂಲಕ ಬರುವ ಭಕ್ತರ ಸುರಕ್ಷತೆ ದೃಷ್ಟಿಯಿಂದ ಪ್ರಾಧಿಕಾರದ ವತಿಯಿಂದ ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಜೊತೆಗೆ 50 ಗೃಹರಕ್ಷಕ ದಳದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ’ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.