ADVERTISEMENT

ಚಾಮರಾಜನಗರ | ತಾಯಿ, ಶಿಶು ಮರಣ ತಡೆಗೆ ಕ್ರಮ ಕೈಗೊಳ್ಳಿ: ಎಂ.ವಿ. ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 2:34 IST
Last Updated 31 ಆಗಸ್ಟ್ 2025, 2:34 IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿದರು
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿದರು   

ಚಾಮರಾಜನಗರ: ಹೆರಿಗೆ ಸಂದರ್ಭ ತಾಯಿ, ಮಗು ಮರಣ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಈಚೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಸಮಯ ತಾಯಿ ಮಗು ಸಾವು ಸಂಭವಿಸಿರುವುದು ನೋವಿನ ವಿಚಾರ. ಗರ್ಭಿಣಿಯರು ಹೆರಿಗೆಗೆ ದಾಖಲಾದಾಗ ತಾಯಿ ಹಾಗೂ ಮಗು ಜೀವಕ್ಕೆ ಅಪಾಯವಾಗದಂತೆ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು. ಚಿಕಿತ್ಸೆ ನೀಡುವಾಗ ವೈದ್ಯರು, ಶುಶ್ರೂಷಕರು ನಿರ್ಲಕ್ಷ್ಯ ವಹಿಸಬಾರದು. ತಾಯಿ ಮಗು ಸಾವಿನ ಪ್ರಕರಣಗಳು ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಪೌಷ್ಟಿಕತೆ ಹಾಗೂ ರಕ್ತಹೀನತೆಯ ಸಮಸ್ಯೆ ಹೆರಿಗೆ ಸಮಯದಲ್ಲಿ ತಾಯಿ, ಮಗುವಿನ ಮರಣಕ್ಕೆ ಪ್ರಮುಖ ಕಾರಣವಾಗುತ್ತಿದೆ. ಕಳೆದ 3 ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿರುವ ತಾಯಿ ಹಾಗೂ ಶಿಶು ಮರಣ ವರದಿ ಪರಿಶೀಲಿಸಿ ಮುಂದೆ ಸಾವು ಸಂಭವಿಸದಂತೆ ತಡೆಯಲು ಮಹಿಳೆಯರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಬೇಕು. ಹೆರಿಗೆಗೆ ದಾಖಲಾಗುವ ಗರ್ಭಿಣಿಯರ ಜನ್ಮದಿನಾಂಕವನ್ನು ಕಡ್ಡಾಯವಾಗಿ ಪರಿಶೀಲಿಸಿ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಇದೇವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ‘ರಕ್ತಹೀನತೆ ತಡೆಗೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಂಗನವಾಡಿಗಳ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ. ಸೆಪ್ಟೆಂಬರ್‌ನಿಂದ ಪ್ರಾಣಸಖಿ ಕಾರ್ಯಕ್ರಮದಡಿ ಹೆರಿಗೆ ಸಮಯದಲ್ಲಿ ವಹಿಸಬೇಕಾದ ಎಚ್ಚರಿಕೆ, ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು. ರಕ್ತಹೀನತೆ ತಡೆಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾತನಾಡಿ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು, ಪದಾರ್ಥಗಳ ದಾಸ್ತಾನು ಸಮರ್ಪಕವಾಗಿ ನಿರ್ವಹಿಸಬೇಕು, ಮಕ್ಕಳ ಹಾಜರಾತಿ ಕ್ರಮಬದ್ಧವಾಗಿರಬೇಕು. ನಿಲಯ ಪಾಲಕರು ಮಕ್ಕಳ ಉಸ್ತುವಾರಿ ಬಗ್ಗೆ ಸಂಪೂರ್ಣ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದಡಿ ನೀಡಲಾಗುವ ಬಾಳೆಹಣ್ಣನ್ನು ನೇರವಾಗಿ ರೈತರಿಂದ ಖರೀದಿಸಬೇಕು. ಹೈನುಗಾರಿಕೆಗೆ ಉತ್ತೇಜನ, ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸೇರಿದಂತೆ ಗ್ರಾಮೀಣ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆಯನ್ನು ಪಾರದರ್ಶಕವಾಗಿ ನಡೆಸಬೇಕು. ಬ್ಯಾಂಕುಗಳಲ್ಲಿ ಸಾಲಸೌಲಭ್ಯ ಕೋರಿ ಅರ್ಜಿ ಸಲ್ಲಿಸುವವರಿಗೆ ತ್ವರಿತವಾಗಿ ಸಾಲ ನೀಡುವ ಪ್ರಕ್ರಿಯೆ ನಡೆಯಬೇಕು ಎಂದರು.

ಕೃಷಿ, ತೋಟಗಾರಿಕೆ, ಕುಡಿಯುವ ನೀರು, ನರೇಗಾ, ಅಲ್ಪಸಂಖ್ಯಾತರ ಕಲ್ಯಾಣ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್, ಉಪ ಕಾರ್ಯದರ್ಶಿ ಶೃತಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಸಭೆಯಲ್ಲಿ ಇದ್ದರು.

‘ಪೌಷ್ಟಿಕ ಆಹಾರ ಕಿಟ್ ತಲುಪಿಸಿ’

ಕಾಡಂಚಿನ ಪ್ರದೇಶಗಳು ಹಾಗೂ ಅರಣ್ಯದಲ್ಲಿ ವಾಸಿಸುವ ಅದಿವಾಸಿಗಳು ದುಶ್ಚಟಗಳಿಗೆ ಬಲಿಯಾಗದಂತೆ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಪೌಷ್ಟಿಕ ಆಹಾರ ಕಿಟ್‍ಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಬೇಕು. ಅಂಗನವಾಡಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಶಾಶ್ವತ ಕಟ್ಟಡಗಳನ್ನು ನಿರ್ಮಾಣ ಮಾಡಲು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಒದಗಿಸಬೇಕು. ಈ ಸಂಬಂಧ ತಹಶೀಲ್ದಾರ್‌ಗಳ ಜೊತೆ ಸಮನ್ವಯ ಸಾಧಿಸಿ ನಿವೇಶನ ಪಡೆಯಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.