ADVERTISEMENT

ತಾಳಬೆಟ್ಟದಿಂದ ದ್ವಿಚಕ್ರ ವಾಹನಗಳ ನಿರ್ಬಂಧ

ಮಹದೇಶ್ವರ ಬೆಟ್ಟ: 18ರಿಂದ 22ರವರೆಗೆ ಮಹಾಶಿವರಾತ್ರಿ ಜಾತ್ರೆ:, ಅಧಿಕಾರಿಗಳ ಸಭೆ ನಡೆಸಿದ ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 15:45 IST
Last Updated 4 ಫೆಬ್ರುವರಿ 2023, 15:45 IST
ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್‌.ನರೇಂದ್ರ, ಸಿ.ಎಸ್‌.ನಿರಂಜನಕುಮಾರ್‌ ಇತರರು ಇದ್ದರು
ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್‌.ನರೇಂದ್ರ, ಸಿ.ಎಸ್‌.ನಿರಂಜನಕುಮಾರ್‌ ಇತರರು ಇದ್ದರು   

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಇದೇ 18ರಿಂದ 22ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಬೆಟ್ಟದ ರಸ್ತೆ ಹಾಗೂ ಬೆಟ್ಟದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಜಾತ್ರೆ ಅವಧಿಯಲ್ಲಿ ತಾಳಬೆಟ್ಟದಿಂದ ದ್ವಿಚಕ್ರವಾಹನಗಳಿಗೆ ನಿರ್ಬಂಧ ವಿಧಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಲೆಮಹದೇಶ್ವರಸ್ವಾಮಿ ದೇವಾಲಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಅವರು ಸಭೆಯಲ್ಲಿ ಮುಂದಿಟ್ಟ ಪ್ರಸ್ತಾವಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ವಿ.ಸೋಮಣ್ಣ, ‘ಇದು ಉತ್ತಮ ಸಲಹೆ. ಬೆಟ್ಟದ ತಿರುವುಗಳಲ್ಲಿ ಅಪಘಾತ ಸಂಭವಿಸುವುದನ್ನು, ವಾಹನ ದಟ್ಟಣೆಯನ್ನು ತಡೆಯಬಹುದು. ಆದರೆ, ಇದರಿಂದ ಭಕ್ತರಿಗೆ ಅನನುಕೂಲವಾಗಬಾರದು. ಅವರನ್ನು ಬೆಟ್ಟಕ್ಕೆ ಕರೆದುಕೊಂಡು ಬರಲು ಸಾರಿಗೆ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ADVERTISEMENT

ಕಾತ್ಯಾಯಿನಿದೇವಿ ಪ್ರತಿಕ್ರಿಯಿಸಿ, ‘ಅಲ್ಲಿಂದ ಭಕ್ತರಿಗಾಗಿ ಪ್ರಾಧಿಕಾರದಿಂದ ಬಸ್‌ ವ್ಯವಸ್ಥೆ ಮಾಡಲಾಗುವುದು. ಉಚಿತವಾಗಿ ಮಾಡಬಹುದು ಇಲ್ಲವೇ, ಕನಿಷ್ಠ ಟಿಕೆಟ್‌ ದರ ಇಡಬಹುದು’ ಎಂದರು.

‘ಬೆಟ್ಟದ ರಸ್ತೆಯಲ್ಲಿ ದೊಡ್ಡ ಬಸ್‌ಗಳ ಸಂಚಾರಕ್ಕೆ ಕಷ್ಟವಾಗುವುದರಿಂದ, ಈ ಉದ್ದೇಶಕ್ಕೆ ಬೆಂಗಳೂರಿನಿಂದ 50 ನಗರಸಾರಿಗೆ ಬಸ್‌ ತರಿಸಬಹುದು’ ಎಂದು ಸೋಮಣ್ಣ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಅವರಿಗೆ ಸೂಚಿಸಿದರು.

ಸ್ವಚ್ಛತೆ, ಆರೋಗ್ಯ, ದಾಸೋಹಕ್ಕೆ ಒತ್ತು ನೀಡಿ: ‘ಐದು ದಿನಗಳ ಕಾಲ ನಡೆಯುವ ಜಾತ್ರೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಬರಲಿದ್ದು, ಅವರಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು. ಸಾಕಷ್ಟು ಶೌಚಾಲಯಗಳನ್ನು ನಿರ್ಮಿಸಬೇಕು. ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕು, ನೆರಳಿನ ವ್ಯವಸ್ಥೆಯೂ ಸಮರ್ಪಕವಾಗಿರಬೇಕು’ ಎಂದರು.

‘ಆರೋಗ್ಯ ಸೇವೆ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಖುದ್ದು ಹಾಜರಿದ್ದು, ವೈದ್ಯರು, ನರ್ಸ್‌ ಇತರ ಸಿಬ್ಬಂದಿ ಸಾಕಷ್ಟು ಔಷಧಿಗಳೊಂದಿಗೆ ಎಂತಹುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು’ ಎಂದು ಸೋಮಣ್ಣ ಡಿಎಚ್‌ಒ ಡಾ.ಕೆ.ಎಂ.ವಿಶ್ವೇಶ್ವರಯ್ಯಗೆ ಸೂಚಿಸಿದರು.

‘ಭಕ್ತರಿಗೆ ದಾಸೋಹ ವ್ಯವಸ್ಥೆ ಸಮರ್ಪಕವಾಗಿರಬೇಕು. ವಿಶೇಷ ದಾಸೋಹ ವ್ಯವಸ್ಥೆ ಮಾಡಬೇಕು. ದೇವಾಲಯದ ಅಲಂಕಾರ ಆಕರ್ಷಕವಾಗಿರಬೇಕು. ಐದು ದಿನಗಳ ಕಾಲ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಬೆಟ್ಟದಲ್ಲಿ ಮದ್ಯದ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದರು.

ಹೆಚ್ಚುವರಿ ಬಸ್‌ ವ್ಯವಸ್ಥೆ: ‘ದೂರದ ಊರುಗಳಿಂದ ಬರುವ ಭಕ್ತರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಹೆಚ್ಚುವರಿ ಬಸ್‌ಗಳನ್ನು ಹಾಕಬೇಕು’ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಅವರಿಗೆ ಸಚಿವರು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ, ‘ಕೆಎಸ್‌ಆರ್‌ಟಿಸಿಯಿಂದ 500 ಹೆಚ್ಚುವರಿ ಬಸ್‌ಗಳನ್ನು ಹಾಕಲಾಗುವುದು. ತಮಿಳುನಾಡಿನ ಸಾರಿಗೆ ಸಂಸ್ಥೆಯೂ 50 ಹೆಚ್ಚುವರಿ ಬಸ್‌ಗಳನ್ನು ಹಾಕುತ್ತಿದೆ’ ಎಂದು ಮಾಹಿತಿ ನೀಡಿದರು.

ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್‌.ನರೇಂದ್ರ, ಎನ್‌.ಮಹೇಶ್‌, ಸಿ.ಎಸ್‌.ನಿರಂಜನಕುಮಾರ್‌, ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಜಿಲ್ಲಾ ಪಂಚಾಯಿತಿ ಸಿಇಒ ಪೂವಿತಾ ಎಸ್‌., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್‌ ಸಂತೋಷ್‌ಕುಮಾರ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

‘ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ನಿರ್ಧಾರ’

ತಾಳಬೆಟ್ಟದಿಂದ ದ್ವಿಚಕ್ರವಾಹನಗಳ ಸಂಚಾರ ನಿರ್ಬಂಧಿಸುವ ಪ್ರಸ್ತಾವದ ಬಗ್ಗೆ ‘ಪ್ರಜಾವಾಣಿ’ಗೆ ಹೆಚ್ಚಿನ ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎಸ್‌.ಕಾತ್ಯಾಯಿನಿದೇವಿ, ‘ಇದೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಈ ಪ್ರಯತ್ನ ಮಾಡಲಾಗುತ್ತಿದೆ. ಬೆಟ್ಟದ ರಸ್ತೆ ಹಾಗೂ ಬೆಟ್ಟದಲ್ಲಿ ವಾಹನಗಳ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ತಾಳಬೆಟ್ಟದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿಂದ ಭಕ್ತರು ಬಸ್‌ನಲ್ಲಿ ಬೆಟ್ಟಕ್ಕೆ ಬರಬಹುದು. ನಾವು ಉಚಿತ ಸಾರಿಗೆ ವ್ಯವಸ್ಥೆ ಮಾಡುವ ಪ್ರಸ್ತಾವ ಇಟ್ಟಿದ್ದೇವೆ. ಕೆಎಸ್‌ಆರ್‌ಟಿಸಿಯವರು ಕನಿಷ್ಠ ಟಿಕೆಟ್‌ ದರ ಇರಬೇಕು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿಯವರು ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳೋಣ ಎಂದಿದ್ದಾರೆ. ಶೀಘ್ರದಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.