ADVERTISEMENT

ಪ್ರತಿಭಟನೆ ಕೈಬಿಡಲು ರೈತರಿಗೆ ಮನವಿ

11ರಂದು ರೈತ ಮುಖಂಡರು, ಅಧಿಕಾರಿಗಳೊಂದಿಗೆ ಸಭೆ: ವಿ.ಸೋಮಣ್ಣ ಭರವಸೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:09 IST
Last Updated 3 ಜುಲೈ 2022, 2:09 IST

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಜಿಲ್ಲೆಯ ರೈತರು ಎದುರಿಸುತ್ತಿರುವ ‌ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಸೋಮವಾರ (ಜುಲೈ 4) ರೈತ ಸಂಘವು ನಗರದಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈ ಬಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಇದೇ ಜುಲೈ 10 ಹಾಗೂ 11ರಂದು ಚಾಮರಾಜನಗರದಲ್ಲೇ ಇರುತ್ತೇನೆ. 11ರಂದು ರೈತ ಮುಖಂಡರ ಸಭೆ ಕರೆದು ರೈತರ ಸಮಸ್ಯೆ ಬೇಡಿಕೆ ಕುರಿತು ಚರ್ಚೆ ಮಾಡಿ ಪರಿಹರಿಸುವ ಕೆಲಸ ಮಾಡುತ್ತೇವೆ’ ಎಂದರು.

‘ಸಭೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಸಮಸ್ಯೆಗಳನ್ನು ಸಂಪೂರ್ಣವಾಗಿ ಚರ್ಚಿಸಿ ಪರಿಹರಿಸಲು ಪ್ರಯತ್ನಿಸಲಾಗುವುದು. ಕರ ನಿರಾಕರಣಾ ಚಳವಳಿಯ ವಿದ್ಯುತ್ ಬಿಲ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಇಂಧನ ಸಚಿವರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಚರ್ಚೆ ನಡೆಸಲಾಗಿದೆ. ಬಿಲ್‌ ಮನ್ನಾ ಕುರಿತು ಸರ್ಕಾರ ತೀರ್ಮಾನಿಸಲಿದ್ದು, ಈ ಬಗ್ಗೆ ಯಾವುದೇ ಒತ್ತಾಯ ಮಾಡದಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರದೇ ನಿಗಮದ ಅಧಿಕಾರಿಗಳು ಕೈಗೊಂಡಿರುವ ತೀರ್ಮಾನದಲ್ಲಿ ತಪ್ಪಾಗಿದೆ’ ಎಂದರು.

ADVERTISEMENT

ಜಿಲ್ಲಾಧಿಕಾರಿ ಮನವಿ

ಧರಣಿ ಸತ್ಯಾಗ್ರಹ ಕೈಬಿಡುವಂತೆ ಉಸ್ತುವಾರಿ ಸಚಿವರಲ್ಲದೆ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಕೂಡ ರೈತ ಮುಖಂಡರಿಗೆ ಮನವಿ ಮಾಡಿದರು.

‘ರೈತರ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇವೆ. ಇದೇ 10 ಹಾಗೂ 11ರಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಇದ್ದು ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ಸರ್ಕಾರದಿಂದ ಏನೇನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ರೈತ ಮುಖಂಡರನ್ನು ಆಹ್ವಾನಿಸಿ ಚರ್ಚಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.