ADVERTISEMENT

ನ್ಯಾಯಬೆಲೆ ಅಂಗಡಿಗಳಲ್ಲಿ ಮಾಹಿತಿ ಫಲಕ ಹಾಕಿ

ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಕೆ.ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 2 ಮೇ 2020, 16:34 IST
Last Updated 2 ಮೇ 2020, 16:34 IST

ಚಾಮರಾಜನಗರ: ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡುದಾರರಿಗೆ ವಿತರಿಸಲಾಗುವ ಪಡಿತರ ಹಾಗೂ ಪ್ರಮಾಣ ಸೇರಿದಂತೆ ಅಗತ್ಯ ಮಾಹಿತಿಯನ್ನು ನೀಡುವ ಫಲಕಗಳನ್ನು ಅಳವಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಇಲಾಖೆಗೆ ಸಂಬಂಧಿಸಿದಂತೆ ಪಡಿತರ ವಿತರಣೆ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಎಷ್ಟು ಪ್ರಮಾಣದಲ್ಲಿ ಅಕ್ಕಿ, ಇತರೆ ಪಡಿತರ ಪದಾರ್ಥಗಳು ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತದೆ ಎಂಬ ಮಾಹಿತಿ ತಿಳಿಯಬೇಕು. ತೂಕ ಪ್ರಮಾಣ ಕೂಡ ಪಡಿತರದಾರರಿಗೆ ತಿಳಿಯುವಂತೆ ಫಲಕ ಪ್ರದರ್ಶಿಸಬೇಕು’ ಎಂದರು.

‘ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ಪಡೆಯುವಂತಿಲ್ಲ. ಪಡಿತರ ಬಿಟ್ಟು ಬೇರೆ ವಸ್ತುಗಳನ್ನು ಖರೀದಿಸುವಂತೆ ಒತ್ತಾಯ ಮಾಡುವ ಹಾಗಿಲ್ಲ. ಯಾವುದೇ ಅಂಗಡಿಗಳಲ್ಲಿ ಬಡ ಪಡಿತರದಾರರಿಂದ ಹಣ ವಸೂಲಿ ಮಾಡುವ ದೂರುಗಳು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಈ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ತೊಂದರೆ ನೀಡಿದರೆ ಸಹಿಸುವುದಿಲ್ಲ’ ಎಂದು ಅವರು ಹೇಳಿದರು.

ADVERTISEMENT

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ‘ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ತೊಂದರೆ ಆಗಬಾರದು. ಪಡಿತರದಾರರಿಂದ ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಪಡಿತರ ಅಂಗಡಿ ಹೊರತುಪಡಿಸಿ ಇತರೆ ಅಂಗಡಿಗಳಲ್ಲಿ ತೂಕ, ಅಳತೆಯಲ್ಲಿ ಲೋಪವಾಗಬಾರದು. ವಸ್ತುಗಳಿಗೆ ಹೆಚ್ಚಿನ ಬೆಲೆ ಪಡೆಯಬಾರದು. ಇಂತಹವುಗಳ ಬಗ್ಗೆ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣವರ್, ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಆಹಾರ ಇಲಾಖೆ ಉಪನಿರ್ದೇಶಕ ರಾಚಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ ಇದ್ದರು.

ಮೊಕದ್ದಮೆ ದಾಖಲಿಸಿ

‘ತೂಕ ಮತ್ತು ಅಳತೆಗೆ ಸಂಬಂಧಿಸಿದ ಅಧಿಕಾರಿಗಳು ವ್ಯಾಪಕವಾಗಿ ಅಂಗಡಿಗಳಿಗೆ ಭೇಟಿ ನೀಡಿ ತೂಕ ಮತ್ತು ಅಳತೆ ಪ್ರಮಾಣ ಸರಿಯಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ವ್ಯತ್ಯಾಸ, ಮೋಸ ಮಾಡುವ ಪ್ರಕರಣಗಳು ಕಂಡುಬಂದಲ್ಲಿ ಮೊಕದ್ದಮೆ ದಾಖಲಿಸಬೇಕು. ಎಲ್ಲ ಭಾಗಗಳಲ್ಲಿಯೂ ತಪಾಸಣೆ ಚುರುಕುಗೊಳಿಸಬೇಕು’ ಎಂದು ಗೋಪಾಲಯ್ಯ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.