ADVERTISEMENT

ಗಡಿಜಿಲ್ಲೆ ಚಾಮರಾಜನಗರದಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 7:16 IST
Last Updated 28 ಸೆಪ್ಟೆಂಬರ್ 2020, 7:16 IST
ಚಾಮರಾಜನಗರದ ದೊಡ್ಡಂಗಡಿ ಬೀದಿಯಲ್ಲಿ ಅಂಗಡಿಗಳು ಮುಚ್ಚಿರುವುದು
ಚಾಮರಾಜನಗರದ ದೊಡ್ಡಂಗಡಿ ಬೀದಿಯಲ್ಲಿ ಅಂಗಡಿಗಳು ಮುಚ್ಚಿರುವುದು   

ಚಾಮರಾಜನಗರ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆ ಹಾಗೂ ಮಸೂದೆಗಳನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಗಡಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎರಡು ರೈತ ಸಂಘಗಳು, ಕಬ್ಬು ಬೆಳೆಗಾರರ ಸಂಘ, ದಲಿತ ಸಂಘಟನೆಗಳು, ಪ‍್ರಗತಿ ಪರರ ಒಕ್ಕೂಟ, ಕಾರ್ಮಿಕ ಸಂಘಟನೆ, ಎಸ್‌ಡಿಪಿಐ, ಕರ್ನಾಟಕ ರಕ್ಷಣಾ ವೇದಿಕೆ, ಬಹುಜನ ವಿದ್ಯಾರ್ಥಿ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಂಡಿವೆ.

ಜಿಲ್ಲಾ ಕೇಂದ್ರ ಚಾಮರಾಜನಗರ ಸೇರಿದಂತೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಿಗ್ಗೆ ಕೆಲವು ಅಂಗಡಿಗಳು ತೆರೆದಿದ್ದವು. ಪ್ರತಿಭಟನೆ ಹಮ್ಮಿಕೊಂಡಿರುವ ಸಂಘಟನೆಗಳ ಪದಾಧಿಕಾರಿಗಳು ಮಾಲೀಕರನ್ನು ಭೇಟಿ ಮಾಡಿ, ಅಂಗಡಿ ಮುಚ್ಚಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ADVERTISEMENT

ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರ ಓಡಾಟ ಕಡಿಮೆ ಇದೆ. ಸರ್ಕಾರಿ ಕಚೇರಿ, ಆಸ್ಪತ್ರೆ, ಬ್ಯಾಂಕ್‌ಗಳು ತೆರೆದಿವೆ. ಔಷಧ ಅಂಗಡಿಗಳು, ಹಾಲಿನ ಕೇಂದ್ರಗಳು ಎಂದಿನಂತೆ ವಹಿವಾಟು ನಡೆಸುತ್ತಿವೆ. ದಿನಸಿ, ಬೇಕರಿ, ಮಾಂಸ ಅಂಗಡಿಗಳು ಸೇರಿದಂತೆಹೆಚ್ಚಿನ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಇನ್ನೂ ಕೆಲವು ತೆರೆದಿವೆ. ಹೋಟೆಲ್‌ಗಳ ಪೈಕಿ ಕೆಲವು ಮುಚ್ಚಿದ್ದರೆ, ಇನ್ನೂ ಕೆಲವು ಗ್ರಾಹಕರಿಗೆ ಆಹಾರ ಒದಗಿಸುತ್ತಿವೆ.ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಪ್ರಯಾಣಿಕರು ಇಲ್ಲ ಎಂಬ ಕಾರಣಕ್ಕೆ ಖಾಸಗಿ ಬಸ್‌ಗಳು ರಸ್ತೆಗೆ ಇಳಿದಿಲ್ಲ.ಆಟೊಗಳ ಓಡಾಟ ಎಂದಿನಂತೆ ಇದೆ. ಖಾಸಗಿ ವಾಹನ ಉಳ್ಳವರ ಸಂಚಾರಕ್ಕೆ ತೊಂದರೆಯಾಗಿಲ್ಲ.

ಸರ್ಕಾರದ ವಿರುದ್ಧ ಆಕ್ರೋಶ: ನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತರಿಗೆ ಮರಣಶಾಸನವಾಗಿರುವ ಕಾನೂನುಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು. ನಂತರ ನಗರ ಪ್ರಮುಖ ರಸ್ತೆಗಳಲ್ಲಿ ಬೈಕ್‌ ರ‍್ಯಾಲಿಯನ್ನೂ ನಡೆಸಿದರು.

ಬಂದ್‌ಗೆ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕೂಡ ಬೆಂಬಲ ನೀಡಿದೆ. ಕಾಂಗ್ರೆಸ್‌ನ ಮುಖಂಡರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು, ತಿದ್ದುಪಡಿ ಕಾಯ್ದೆಗಳನ್ನು ಖಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.