ADVERTISEMENT

ಚಾಮರಾಜನಗರ: ನಗರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿ -ಶಾಸಕ ಪುಟ್ಟರಂಗಶೆಟ್ಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 8:03 IST
Last Updated 7 ಅಕ್ಟೋಬರ್ 2021, 8:03 IST
ಸಿ.ಪುಟ್ಟರಂಗಶೆಟ್ಟಿ
ಸಿ.ಪುಟ್ಟರಂಗಶೆಟ್ಟಿ   

ಚಾಮರಾಜನಗರ: ‘ಸರ್ಕಾರಿ ವೈದ್ಯಕೀಯ ಕಾಲೇಜಿನ ಹೊಸಬೋಧನಾ ಆಸ್ಪತ್ರೆಯ ಉದ್ಘಾಟನೆಗಾಗಿ ಗುರುವಾರ ಜಿಲ್ಲೆಗೆ ಬರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಗರದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಬುಧವಾರ ಒತ್ತಾಯಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಸ್ಪತ್ರೆ ಉದ್ಘಾಟನೆಗಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಬರುತ್ತಿದ್ದಾರೆ. ಮುಖ್ಯಮಂತ್ರಿ ಕೂಡ ಬರುತ್ತಿರುವುದು ಸಂತಸ ತಂದಿದೆ. ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಜಿಲ್ಲಾ ಕೇಂದ್ರದ ಸಮಸ್ಯೆಗಳನ್ನು ತಿಳಿದುಕೊಂಡು, ಅಭಿವೃದ್ಧಿಗಾಗಿ ವಿಶೇಷ ಅನುದಾನ ಘೋಷಿಸಬೇಕು’ ಎಂದರು.

‘ಚಾಮರಾಜನಗರ ಜಿಲ್ಲಾ ಕೇಂದ್ರವಾಗಿ 25 ವರ್ಷಗಳಾದರೂ ಇನ್ನೂ ಅಭಿವೃದ್ಧಿಯಾಗಿಲ್ಲ. ಕುಡಿಯುವ ನೀರು, ಒಳ ಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಗರೋತ್ಥಾನ ಯೋಜನೆಯಡಿ ₹ 50 ಕೋಟಿ ವಿಶೇಷ ಅನುದಾನ ಕೊಡಿಸಿದ್ದರಿಂದ ಸ್ವಲ್ಪ ಅಭಿವೃದ್ಧಿ ಕೆಲಸ ಆಗಿದೆ. ಆದರೆ, ಇನ್ನೂ ಪೂರ್ಣಗೊಂಡಿಲ್ಲ’ ಎಂದು ಹೇಳಿದರು.

ADVERTISEMENT

ಕುಡಿಯುವ ನೀರಿನ ಯೋಜನೆ: ‘ನಗರ ಈಗ ಸಾಕಷ್ಟು ಪ್ರಮಾಣದಲ್ಲಿ ಬೆಳೆದಿದೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ಇದೆ. ಮೂರನೇ ಹಂತದ ಕುಡಿಯುವ ನೀರಿನ ಯೋಜನೆಗೆ ಸಮಗ್ರ ಯೋಜನಾ ವರದಿ ತಯಾರಿಸಲಾಗಿದೆ. ಅದಕ್ಕೆ ₹ 276 ಕೋಟಿಯ ಅಗತ್ಯವಿದೆ. ನಾನು ಉಸ್ತುವಾರಿ ಸಚಿವನಾಗಿದ್ದಾಗ ಯೋಜನಾ ವರದಿ ಸಿದ್ಧಪಡಿಸಿದ್ದೆ. ಇನ್ನೇನು ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಬೇಕು ಎನ್ನುವಾಗ ಸರ್ಕಾರ ಬಿದ್ದು ಹೋಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಯೋಜನೆಗೆ ಒಪ್ಪಿಗೆ ನೀಡಬೇಕು’ ಎಂದು ಶಾಸಕರು ಒತ್ತಾಯಿಸಿದರು.

‘ಒಳಚರಂಡಿ ಕಾಮಗಾರಿ‌ಯೂ ಸಮರ್ಪಕವಾಗಿ ಆಗಿಲ್ಲ. ಅದಕ್ಕೆ ಪ್ರತ್ಯೇಕ ಅನುದಾನದ ಅಗತ್ಯವಿದೆ. ರಾಷ್ಟ್ರೀಯ ಹೆದ್ದಾರಿ 209ರ ವಿಸ್ತರಣೆ ಸಂದರ್ಭದಲ್ಲಿ ಮನೆ ಕಳೆದುಕೊಂಡ ಬಡವರಿಗೆ ನಿವೇಶನಗಳನ್ನು ನೀಡಲಾಗಿದೆ. ಅವರಿಗೆ ಮನೆ ನಿರ್ಮಾಣಕ್ಕೆ ಅನುದಾನದ ಅಗತ್ಯವಿದೆ. ಕೆಎಸ್‌ಆರ್‌ಟಿಸಿ ಹೊಸ ಬಸ್‌ ನಿಲ್ದಾಣಕ್ಕೆ ರೇಷ್ಮೆ ಇಲಾಖೆಗೆ ಸೇರಿದ ಐದು ಎಕರೆ ಜಾಗ ಗುರುತಿಸಿದ್ದು, ಅದಕ್ಕಿನ್ನೂ ಅನುಮತಿ ಸಿಕ್ಕಿಲ್ಲ’ ಎಂದರು.

ಕೈಗಾರಿಕೆಗೆ ಒತ್ತು ನೀಡಲು ಆಗ್ರಹ
‘ಕೆಲ್ಲಂಬಳ್ಳಿ–ಬದನಗುಪ್ಪೆಯಲ್ಲಿ 1,400 ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಸಾಹತು ಅಭಿವೃದ್ಧಿ ಪಡಿಸಿದ್ದು, ಇನ್ನೂ ಪೂರ್ಣ ಪ್ರಮಾಣದಲ್ಲಿ ಕೈಗಾರಿಕೆಗಳು ಬಂದಿಲ್ಲ. ದೊಡ್ಡ ದೊಡ್ಡ ಉದ್ದಿಮೆ ಬಂದರೆ ಸ್ಥಳೀಯರಿಗೆ ಅನುಕೂಲವಾಗುತ್ತದೆ. ಮುಖ್ಯಮಂತ್ರಿ ಈ ನಿಟ್ಟಿನಲ್ಲಿ ಗಮನ ಹರಿಸಬೇಕು’ ಎಂದು ಪುಟ್ಟರಂಗಶೆಟ್ಟಿ ಹೇಳಿದರು.

‘ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದು, 24 ಮಂದಿಯ ಕುಟುಂಬಗಳಿಗೆ ಆರಂಭದಲ್ಲಿ ತಲಾ ₹ 2 ಲಕ್ಷ, ನಂತರ 13 ಮಂದಿಯ ಕುಟುಂಬಗಳಿಗೆ ತಲಾ ₹ 3 ಲಕ್ಷ ಪರಿಹಾರ ನೀಡಲಾಗಿದೆ. ಉಳಿದವರಿಗೆ ಸಿಕ್ಕಿಲ್ಲ. ಎಲ್ಲರಿಗೂ ತಲಾ ₹ 5 ಲಕ್ಷ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.