
ಚಾಮರಾಜನಗರ: ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಯ್ಯನಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಅನುದಾನದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ನೂತನ ಕೊಠಡಿಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿ, ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ವಿದಾರ್ಥಿ ವೇತನ, ಹಾಸ್ಟೆಲ್‌ಗಳ ವ್ಯವಸ್ಥೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳ ಸೇರಿದಂತೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿದ್ದು ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.
ಚಾಮರಾಜನಗರದಲ್ಲಿ ಪದವಿಪೂರ್ವ, ಪದವಿ, ವಿಶ್ವವಿದ್ಯಾಲಯ, ಎಂಜಿನಿಯರಿಂಗ್ ಕಾಲೇಜು, ಕೇಂದ್ರಿಯ ವಿದ್ಯಾಲಯ, ಕೃಷಿ ವಿಜ್ಞಾನ ಕಾಲೇಜು, ಮೆಡಿಕಲ್ ಕಾಲೇಜು, ಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ಶಾಲೆಗಳಿದ್ದು ಉನ್ನತ ಶಿಕ್ಷಣಕ್ಕೆ ಪೂರಕವಾದ ವಾತಾವರಣ ಇದೆ ಎಂದರು.
ದೇಶದ ಅಭಿವೃದ್ದಿ ಶಿಕ್ಷಣ ಕ್ಷೇತ್ರದ ಬೆಳವಣಿಯ ಮೇಲೆ ನಿಂತಿದ್ದು , ಸಂವಿಧಾನಾತ್ಮಕ ಸೌಲಭ್ಯ ಪಡೆಯಲು ಶಿಕ್ಷಣವೇ ಆಧಾರ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು, ಅಧಿಕಾರಾವಧಿಯಲ್ಲಿ ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ಶಾಸಕ ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಂ.ಸಿ.ಮಹದೇವಮ್ಮ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಅಂಬಿಕಾ, ಉಪಾಧ್ಯಕ್ಷ ಮರಿಸ್ವಾಮಿ, ಎಪಿಎಂಸಿ ಸದಸ್ಯ ಎ.ಎಸ್.ಪ್ರದೀಪ್, ಬಿಇಒ ಹನುಮ ಶೆಟ್ಟಿ, ಸಿಆರ್‌ಪಿ ಮಹದೇವಯ್ಯ, ಮುಖ್ಯ ಶಿಕ್ಷಕಿ ಶಶಿಕಲಾ, ಅಸ್ಲಂಪಾಷ, ಯಜಮಾನರಾದ ನಂಜುಂಡಸ್ವಾಮಿ, ಸುಬ್ಬೇಗೌಡ, ಮಲ್ಲಯ್ಯನಪುರ ಶಿವಣ್ಣ, ನೋಡಲ್ ಅಧಿಕಾರಿಗಳಾದ ತ್ಯಾಗರಾಜು, ಶಿವಕುಮಾರ್, ನಿವೃತ್ತ ಬಿಇಒ ಸೋಮಣ್ಣೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.