ADVERTISEMENT

ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಂಸದ ಶ್ರೀನಿವಾಸ ಪ್ರಸಾದ್‌

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತು

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 12:35 IST
Last Updated 9 ಜೂನ್ 2021, 12:35 IST
 ಶ್ರೀನಿವಾಸ ಪ್ರಸಾದ್‌, ಪ್ರಜಾವಾಣಿ ಚಿತ್ರ
 ಶ್ರೀನಿವಾಸ ಪ್ರಸಾದ್‌, ಪ್ರಜಾವಾಣಿ ಚಿತ್ರ   

ಕೊಳ್ಳೇಗಾಲ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ಬುಧವಾರ ಹೇಳಿದರು.

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಯಕತ್ವ ವಿಚಾರಕ್ಕೆ ಸಂಬಂಧಿಸಿದ ಗೊಂದಲ, ಊಹಾಪೋಹಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ನೇರವಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕೂಡ, ‘ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಯಾರೂ ಎಲ್ಲಿಯೂ ಮಾತನಾಡಬಾರದು, ಅದು ಹೈಕಮಾಂಡ್‌ನ ನಿರ್ಧಾರಕ್ಕೆ ಬಿಟ್ಟಿದ್ದು’ ಎಂದು ಸೂಚಿಸಿದ್ದಾರೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ನಮ್ಮ ಅಭಿಪ್ರಾಯಗಳು ಏನಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದೇವೆ’ ಎಂದರು.

ಚಾಮರಾಜನಗರ ಕೋವಿಡ್‌ ಆಸ್ಪತ್ರೆಯಲ್ಲಿ ಆಮ್ಲಜನಕ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಮುಕ್ತಾಯದ ನಂತರ ಎಲ್ಲವೂ ಗೊತ್ತಾಗುತ್ತದೆ’ ಎಂದರು.

ADVERTISEMENT

ಸಂತ್ರಸ್ತರಿಗೆ ಕಡಿಮೆ ಪರಿಹಾರ ನೀಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹೈಕೋರ್ಟ್‌ ನಿರ್ದೇಶನದಂತೆ ತಲಾ ₹2 ಲಕ್ಷ ಪರಿಹಾರ ನೀಡಲಾಗಿದೆ. ಇದು ತಾತ್ಕಾಲಿಕ ಪರಿಹಾರ’ ಎಂದು ಹೇಳಿದರು.

ಸೋಂಕಿನ ಪ್ರಕರಣ ಇಳಿಮುಖ: ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಇಳಿಮುಖವಾಗುತ್ತಿದೆ. ಸಾವಿನ ಪ್ರಮಾಣವೂ ತಗ್ಗಿದೆ.ಇದೇ 15 ನಂತರ ಕೋವಿಡ್‌ ನಿಯಂತ್ರಣಕ್ಕೆ ಬರಲಿದೆ. ಲಾಕ್‌ಡೌನ್ ಸಡಿಲಿಕೆ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಈಗಾಗಲೇ ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ವೈದ್ಯಕೀಯ ಕ್ಷೇತ್ರವು ಬಹಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದೆ. ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೇಕಾದ ಹಾಸಿಗೆ, ಆಮ್ಲಜನಕ, ಔಷಧೋಪಚಾರದಲ್ಲಿ ಕೊರತೆಯಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.