ಹನೂರು: ತಾಲ್ಲೂಕಿನ ಬಂಡಳ್ಳಿ ಹಾಗೂ ಮಣಗಳ್ಳಿ ಗ್ರಾಮಗಳ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣದ ಕಾಮಗಾರಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕರು, ಈ ಮಾರ್ಗದ ರಸ್ತೆಯಲ್ಲಿ ನಿತ್ಯ ಬಸ್, ಲಾರಿ, ದ್ವಿಚಕ್ರ, ತ್ರಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಆದರೆ ಈ ಮಾರ್ಗದ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದು, ಹಾಳಾಗಿತ್ತು. ಮಳೆ ಬಂದ ವೇಳೆ ಗುಂಡಿಗಳಲ್ಲಿ ನೀರು ನಿಲ್ಲುವಂತಾಗಿತ್ತು. ಇದರಿಂದ ವಾಹನ ಸವಾರರು ಸಂಚರಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದರು. ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಸುಮಾರು ₹24.80 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚಿಸಿದರು.
ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರು, ಸ್ವಚ್ಛತೆ, ರಸ್ತೆ, ವಿದ್ಯುತ್ ಇನ್ನಿತರ ಅಗತ್ಯ ಮೂಲಸೌಕರ್ಯ ಕೊರತೆ ಇದ್ದು, ಪ್ರತಿ ಗ್ರಾಮಗಳಲ್ಲಿ ತಲೆದೋರಿರುವ ಸಮಸ್ಯೆಗಳ ಬಗ್ಗೆ ಈಗಾಗಲೆ ಮಾಹಿತಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಗಮನಹರಿಸಿ ಹಂತ ಹಂತವಾಗಿ ಮೂಲಸೌಕರ್ಯಗಳ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ, ಎಇ ಸುರೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಬು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.