ADVERTISEMENT

ಡೆಂಗಿ ತಡೆಗೆ ಮುಂಜಾಗ್ರತೆಯೇ ಮದ್ದು: ಡಿಎಚ್‌ಒ

​ಪ್ರಜಾವಾಣಿ ವಾರ್ತೆ
Published 16 ಮೇ 2022, 16:15 IST
Last Updated 16 ಮೇ 2022, 16:15 IST
ಡೆಂಗಿ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಹಾಗೂ ಇತರರು ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಬಿತ್ತಿಪತ್ರ ಬಿಡುಗಡೆ ಮಾಡಿದರು
ಡೆಂಗಿ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಹಾಗೂ ಇತರರು ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಬಿತ್ತಿಪತ್ರ ಬಿಡುಗಡೆ ಮಾಡಿದರು   

ಚಾಮರಾಜನಗರ: ‘ಡೆಂಗಿ ಜ್ವರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಅವರು ಸೋಮವಾರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಜೆಎಸ್ಎಸ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಮಳೆ ಆರಂಭವಾಗಿರುವುದರಿಂದ ಗ್ರಾಮಾಂತರ ಪ್ರದೇಶಗಳು, ನಗರ ಕೊಳಚೆ ಪ್ರದೇಶಗಳಲ್ಲಿ ಆರೋಗ್ಯ, ಸ್ವಚ್ಛತೆ ಬಗ್ಗೆ ಗಮನಹರಿಸಬೇಕು. ಮಳೆಗಾಲದಲ್ಲಿ ಸಾಮಾನ್ಯವಾಗಿ ಮಲೇರಿಯ, ಚಿಕೂನ್‌ಗುನ್ಯಾ ಹಾಗೂ ಡೆಂಗಿ ಜ್ವರ ಹಬ್ಬುವ ಸಾಧ್ಯತೆ ಇದ್ದು ಈ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ರೋಗ ತಡೆಗೆ ವಿಶೇಷ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ’ ಎಂದರು.

‘ವಿದ್ಯಾರ್ಥಿಗಳು ಸಹ ಡೆಂಗಿ ಜ್ವರದ ಕುರಿತು ಮಾಹಿತಿ ಪಡೆದು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಿವು ಮೂಡಿಸಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರೊಡನೆ ಕೈ ಜೋಡಿಸಿದಾಗ ಮಾತ್ರ ಡೆಂಗಿ ಹರಡುವಿಕೆಯನ್ನು ತಡೆಯಲು ಸಾಧ್ಯವಾಗುತ್ತದೆ’ ಎಂದು ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ತಿಳಿಸಿದರು.

ADVERTISEMENT

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಾಂತರಾಜು, ಚಾಮರಾಜನಗರ ನಗರಸಭೆ ಆಯುಕ್ತರಾದ ಕರಿಬಸವಯ್ಯ ಮಾತನಾಡಿದರು.

ಇದೇ ವೇಳೆ ಡೆಂಗಿ ಜ್ವರ ತಡೆಯುವ ಸಂಬಂಧ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ.ಮಹದೇವು, ಜೆ.ಎಸ್.ಎಸ್. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಜಿ.ವಿನಯ್ ಕುಮಾರ್, ನಗರಸಭೆ ಪರಿಸರ ಎಂಜಿನಿಯರ್ ಗಿರಿಜಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.